ಬೆಂಗಳೂರು ;– ಕೇಂದ್ರ ಸರ್ಕಾರವನ್ನು ಟೀಕೆ ಮಾಡುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ಸಿಎಂ ಸಿದ್ದರಾಮಯ್ಯ ಅವರು ದಾರಿ ಮಾಡಿಕೊಟ್ಟಿದ್ದಾರೆ ಎಂದು ಬಿ ವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಅನುಭವಿಗಳಾಗಿರುವ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ, ಸದನವನ್ನು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಲು ಬಳಸಿದ್ದಾರೆ ಎಂದರು.
ಸಿದ್ದರಾಮಯ್ಯ ಬರಿ ಕಾಂಗ್ರೆಸ್ ಮುಖ್ಯಮಂತ್ರಿ ಅಲ್ಲ. ಆರು ಕೋಟಿ ಜನರ ಪ್ರತಿನಿಧಿ ಎಂಬುದನ್ನು ಮರೆಯಬಾರದು. ದೇಶದ 135 ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಗೌರವದಿಂದ ಮಾತನಾಡಬೇಕು ಎಂದ ಅವರು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ 80 ಸಾವಿರದಿಂದ ಒಂದು ಲಕ್ಷ ಕೋಟಿ ರೂ. ಸಾಲ ಮಾಡಬೇಕಾದ ಪರಿಸ್ಥಿತಿ ಎದುರಾಗುವ ಸಾಧ್ಯತೆಗಳಿವೆ. ಮದ್ಯದ ದರ ಏರಿಕೆ ಮಾಡಿರುವುದರಿಂದ ಗ್ರಾಮೀಣ ಭಾಗದಲ್ಲಿ ಕಳ್ಳಭಟ್ಟಿ ಹೆಚ್ಚಾಗಲಿದೆ. ಹಿಂದಿನ ಸರ್ಕಾರ ಆರ್ಥಿಕ ಶಿಸ್ತು ಮೀರಿದೆ ಎಂದು ಮಾಡಿರುವ ಟೀಕೆಯಲ್ಲಿ ಸತ್ಯಾಂಶವಿಲ್ಲ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ 402 ಕೋಟಿ ರೂ. ಉಳಿತಾಯ ಬಜೆಟ್ ಮಂಡಿಸಿದ್ದಾರೆ ಎಂದು ಹೇಳಿದರು.