ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು “ನಾಲಾಯಕ್ ಮಗ” (Naalayak Son) ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಪ್ರಿಯಾಂಕ್ ಗಾಂಧಿ ಈ ಹೇಳಿಕೆ ನೀಡಿದ್ದರು. ಶಾಸಕನ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ದೂರು ದಾಖಲಿಸಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿಗಳ ಮೇಲೆ ವೈಯಕ್ತಿಕ ವಾಗ್ದಾಳಿ ನಡೆಸಿದ್ದಾರೆ. ಆ ಮೂಲಕ ಮಾದರಿ ನೀತಿ ಸಂಹಿತೆ ನಿಯಮ ಉಲ್ಲಂಘಿಸಿದ್ದಾರೆ. “ನಾಲಾಯಕ್” ಎಂದರೆ ಅಪ್ರಯೋಜಕ ಎಂದರ್ಥ. ಅಂತಹ ಪದವನ್ನು ಈ ದೇಶಕ್ಕಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಪ್ರಧಾನಿಗಳ ವಿರುದ್ಧ ಬಳಸಿರುವುದು ಅಕ್ಷಮ್ಯ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಗಳನ್ನು ವಿಷದ ಹಾವು ಎಂದು ನಿಂದಿಸಿದ್ದರು. ಈ ಹೇಳಿಕೆ ಬೆನ್ನಲ್ಲೇ ಖರ್ಗೆ ಅವರ ಪುತ್ರರೂ ಆದ ಶಾಸಕ ಪ್ರಿಯಾಂಕ್ ಖರ್ಗೆ ಮತ್ತೊಂದು ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಶೋಭಾ ಕರಂದ್ಲಾಜೆ ಅವರು ಆಯೋಗಕ್ಕೆ ಒತ್ತಾಯಿಸಿದ್ದಾರೆ.