ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನ ಇದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಹಲವು ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿರುವ ಕಾಂಗ್ರೆಸ್ ಗೋಕಾಕ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಹೊಸ ಮುಖವನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಟಿಕೆಟ್ ಆಸೆಯಲ್ಲಿದ್ದ ಅಶೋಕ್ ಪೂಜಾರಿಗೆ ಟಿಕೆಟ್ ಕೈತಪ್ಪಿದೆ.
ಗೋಕಾಕ ಕ್ಷೇತ್ರಕ್ಕೆ ಅಚ್ಚರಿ ಎಂಬಂತೆ ಡಾ ಮಹಾಂತೇಶ್ ಕಡಾಡಿ ಅವರಿಗೆ ಮಣೆ ಹಾಕಲಾಗಿದೆ. ಮಹಾಂತೇಶ್ ಅವರು ವೈದ್ಯರಾಗಿದ್ದು, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಮಹಾಂತೇಶ್ ಕಡಾಡಿ ಎಂಬ ಹೊಸ ಮುಖವನ್ನು ಕಣಕ್ಕಿಳಿಸುತ್ತಿರುವುದು ಬೆಳಗಾವಿ ಜಿಲ್ಲೆಯಲ್ಲಿ ಅಚ್ಚರಿಗೆ ಕಾರಣವಾಗಿದೆ.
ಗೋಕಾಕ ವಿಧಾನಸಭಾ ಕ್ಷೇತ್ರದಿಂದ ಅಶೋಕ ಪೂಜಾರಿ ತಮಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸದಲ್ಲಿದ್ದರು. ಟಿಕೆಟ್ ನೀಡುತ್ತೇವೆ ಎಂದೇ ಅಶೋಕ್ ಪೂಜಾರಿ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳಲಾಗಿತ್ತು ಎಂದು ಅವರೇ ಹೇಳಿಕೊಂಡಿದ್ದರು. ಆದರೆ, ಈಗ ಕಾಂಗ್ರೆಸ್ ವರಿಷ್ಠರು ಈ ಎಲ್ಲ ನಿರೀಕ್ಷೆಗಳನ್ನು ಹುಸಿಮಾಡಿ ಅಚ್ಚರಿಯ ರೀತಿಯಲ್ಲಿ ಮಹಾಂತೇಶ್ ಕಡಾಡಿ ಅವರಿಗೆ ಟಿಕೆಟ್ ನೀಡಿದ್ದಾರೆ.