ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಹೋದರೆ ಗ್ಯಾರಂಟಿ ರದ್ದಾಗುತ್ತದೆ ಎಂಬ ಶಾಸಕ ಬಾಲಕೃಷ್ಣ ಹೇಳಿಕೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ನಿಖಿಲ್ ಕುಮಾರಸ್ವಾಮಿ, ಲೋಕಸಭೆಗೂ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ ಎಂದು ಲೇವಡಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ. ಕೊಟ್ಟ ಕೈಯ್ಯಲ್ಲೇ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಫುಟವಾಗಿ ಗೋಚರಿಸುತ್ತಿದೆ. ಪಕ್ಷ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಅಪ್ಪಣೆ ಇಲ್ಲದೆ ಶಾಸಕರು ಇಂಥ ಮಹತ್ವದ ಹೇಳಿಕೆಯನ್ನು ಅದೂ ಚುನಾವಣೆ ಹೊತ್ತಿನಲ್ಲಿ ಕೊಡಲು ಸಾಧ್ಯವೇ? ಅಲ್ಲಿಗೆ ಯುದ್ಧಕ್ಕೆ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ ಎಂದಿದ್ದಾರೆ.