ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಕ್ರಮವಾಗಿ ಗೆದ್ದಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಜೆಪಿ ಭವನದಲ್ಲಿ ಮಾತನಾಡಿದ ಅವರು, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಕಾಂಗ್ರೆಸ್ ಪಕ್ಷವು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಹಂಚಿದ ಕ್ಯೂ ಆರ್ ಕೊಡುಗಳುಳ್ಳ ಗಿಫ್ಟ್ ಕೂಪನ್ಗಳೇ ಕಾರಣ. ಇದು ಗಂಭೀರ ಸ್ವರೂಪದ ಚುನಾವಣೆ ಅಕ್ರಮ, ಮೂರು ಸಾವಿರ ಹಾಗೂ ಐದು ಸಾವಿರ ಮೊತ್ತದ ಕ್ಯೂ ಆರ್ ಕೋಡ್ಗಳನ್ನು ಹೊಂದಿರುವ ಕೂಪನ್ಗಳನ್ನು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಮತದಾರರಿಗೆ ಹಂಚಲಾಯಿತು.
ಈ ಕೂಪನ್ಗಳಿಂದಲೇ ನಾವು ಸೋಲಬೇಕಾಯಿತು. ಕಾಂಗ್ರೆಸ್ ಅಕ್ರಮವಾಗಿ ಗೆದ್ದಿದೆ. ಈ ಬಗ್ಗೆ ತನಿಖೆ ಮಾಡಿಸುತ್ತೀರಾ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದರು. ಹೀಗೆ ಕೂಪನ್ಗಳನ್ನು ಹಂಚಲು ಕಾಂಗ್ರೆಸ್ ಅಭ್ಯರ್ಥಿಗಳು ಹಣ ಎಲ್ಲಿಂದ ತಂದರು? ಕಾಂಗ್ರೆಸ್ ಅಭ್ಯರ್ಥಿ ಗೆದ್ದರಷ್ಟೇ ಈ ಕೂಪನ್ ನಗದಾಗುತ್ತದೆ. ಆಗ ಕೂಪನ್ ಹೊಂದಿರುವವರು ನಿಗದಿತ ಮಾಲ್ ಅಥವಾ ಅಂಗಡಿಗೆ ಹೋಗಿ ಕೂಪನ್ನಲ್ಲಿ ನಿಗದಿತ ಮೊತ್ತದ ವಸ್ತುಗಳನ್ನು ಖರೀದಿ ಮಾಡಬಹುದು ಎಂದು ಆಮಿಷ ಒಡ್ಡಲಾಗಿದೆ. ಇದು ಚುನಾವಣೆಯ ಮಹಾ ಅಕ್ರಮ. ಈ ಚುನಾವಣೆ ಆಯೋಗ ತನಿಖೆ ಮಾಡಬೇಕು ಎಂದು ಒತ್ತಾಯ ಮಾಡಿದರು.