ಕೊಲೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ವಿಚರಣೆಯಲ್ಲಿರುವ ನಟ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ, ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಂತಹ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.
ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಹಾಗೂ ಫೋಟೋ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತಂದು ಕೊಲೆ ಮಾಡಲಾಗಿತ್ತು. ಕೊಲೆಯ ಬಳಿಕ ರೇಣುಕಾಸ್ವಾಮಿ ಶವವನ್ನು ಸುಮ್ಮನಹಳ್ಳಿಯ ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ಸದ್ಯ ಪ್ರಕರಣ ಸಂಬಂಧ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿ 17 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.