ಬೆಂಗಳೂರು: ಮುರುಡೇಶ್ವರದಲ್ಲಿಸಮುದ್ರ ಪಾಲಾಗಿದ್ದ ನಾಲ್ವರು ವಿದ್ಯಾರ್ಥಿನಿಯರ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ, ಲಾವಣ್ಯ, ವಂದನಾ ಹಾಗೂ ಶ್ರಾವಂತಿ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ, ಸಂತಾಪ ಸೂಚಿಸಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು. ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.
ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.