ನಿರ್ಮಾಪಕರ ವಿರುದ್ಧ ಮಾನಹಾನಿ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ ನಟ ಸುದೀಪ್ ಹೇಳಿಕೆ ದಾಖಲಿಸಿದ್ದಾರೆ.
ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರು ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ಮತ್ತು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸುದೀಪ್ ದಾಖಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ 13ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ವೆಂಕಣ್ಣ ಬಸಪ್ಪ ಹೊಸಮನಿ ಆದೇಶ ಕಾಯ್ದಿರಿಸಿದರು.
ನ್ಯಾಯಾಲಯದ ಹಿಂದಿನ ನಿರ್ದೇಶನದಂತೆ ತಮ್ಮ ವಕೀಲರೊಂದಿಗೆ ಗುರುವಾರ ವಿಚಾರಣೆಗೆ ಹಾಜರಾದ ಸುದೀಪ್, ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಮನೆ ಕಟ್ಟಲು ತಮಗೆ ಹಣದ ನೆರವು ನೀಡಿರುವುದಾಗಿ ಸುದ್ದಿಗೋಷ್ಠಿ ನಡೆಸಿ ಸುಳ್ಳು ಹೇಳಿದ್ದಾರೆ. ಇದರಿಂದ ಹಲವರು ತಮ್ಮನ್ನು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ 22 ವರ್ಷಗಳಿಂದ ಚಿತ್ರರಂಗದಲ್ಲಿ ಕಷ್ಟಪಟ್ಟು ಗಳಿಸಿದ್ದ ಹೆಸರು ಹಾಗೂ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂಬುದೂ ಸೇರಿದಂತೆ ಖಾಸಗಿ ದೂರಿನಲ್ಲಿ ಉಲ್ಲೇಖಿಸಿರುವ ವಿಚಾರಗಳ ಬಗ್ಗೆ ಪ್ರಮಾಣೀಕೃತ ಹೇಳಿಕೆ ದಾಖಲಿಸಿ, ಕೆಲವೊಂದು ದಾಖಲೆ ಒದಗಿಸಿದ್ದಾರೆ.
ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನಿರ್ಮಾಪಕರು ಕ್ಷಮೆ ಕೋರಿದರೆ ಅವರನ್ನು ಕ್ಷಮಿಸುವಿರಾ? ಅವರೊಂದಿಗೆ ರಾಜಿ ಸಂಧಾನ ಮಾಡಿಕೊಳ್ಳುವಿರಾ ಎಂದು ಸುದೀಪ್ಗೆ ಕೇಳಿದರು. ಈ ಪ್ರಶ್ನೆಗೆ ಸುದೀಪ್ ಯಾವುದೇ ಹೇಳಿಕೆ ನೀಡದಿದ್ದರೂ, ಅವರ ಪರ ವಕೀಲರು ಉತ್ತರಿಸಿ, ಯಾವುದೇ ರೀತಿಯಲ್ಲಿಯೂ ರಾಜಿ ಸಂಧಾನ ಮಾಡಿಕೊಳ್ಳುವುದಿಲ್ಲ. ಈ ರೀತಿ ಮಾನಹಾನಿ ಮಾಡಿದವರಿಗೆ ಪಾಠ ಕಲಿಸಬೇಕಿದೆ ಎಂದು ಹೇಳಿದರು.