ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಇಂದಿನಿಂದ ಮಹಾಯುತಿ 2.O ಸರ್ಕಾರ ಶುರುವಾಗಲಿದೆ. ಇಂದು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು, ಏಕನಾಥ್ ಶಿಂಧೆ, ಅಜಿತ್ ಪವಾರ್ ಉಪಮುಖ್ಯಮಂತ್ರಿ ಹುದ್ದೆ ಸಿಗಲಿದೆ. ಇಂದು ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಪ್ರಕಟಗೊಂಡ 12 ದಿನಗಳ ಬಳಿಕ ಮಹಾಯುತಿ ಸರ್ಕಾರ ರಚನೆಯಾಗುತ್ತಿದೆ. ಈ ಹಿಂದೆ ಸಿಎಂ ಆಗಿದ್ದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಮತ್ತು ಎನ್ಸಿಪಿ ನಾಯಕ ಅಜಿತ್ ಪವಾರ್ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ.
ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿದ್ದತೆ ನಡೆದಿದೆ. ಗುರುವಾರ ಸಂಜೆ 5:30ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಬುಧವಾರ ರಾಜಭವನಕ್ಕೆ ಭೇಟಿ ನೀಡಿದ್ದ, ಮಹಾಯುತಿ ಮೈತ್ರಿಕೂಟದ ನಾಯಕರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು.
ರಾಜ್ಯಪಾಲರಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ ನಂತರ, ಮಾತನಾಡಿದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮಹಾಯುತಿ ಸರ್ಕಾರ ರಚನೆಗೆ ಹಕ್ಕು ಸಾಧಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ಹೆಸರನ್ನು ಬೆಂಬಲಿಸಿದ್ದಕ್ಕಾಗಿ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.