ಧಾರವಾಡ: ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಸೋಮವಾರ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಹಂತದ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಿಲ್ಲಾ ಪಂಚಾಯತಿ ಮೊದಲ ಮಹಡಿಯಲ್ಲಿ ಸಮಸ್ಯೆಗಳ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು.
ಎರಡನೇ ಮಹಡಿಯಲ್ಲಿರುವ ಸಭಾಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವರು ಸಮಸ್ಯೆಗಳಿರುವ ಅರ್ಜಿ ಸಲ್ಲಿಸಿದವರನ್ನು ಕರೆಯಿಸಿ ಅವರ ಅಹವಾಲು ಆಲಿಸಿ ಸ್ಥಳದಲ್ಲೇ ಕೆಲವೊಂದಿಷ್ಟು ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಿದರು. ತಮ್ಮೂರಿನಲ್ಲಿ ರಸ್ತೆ,
ಬೀದಿ ದೀಪ, ಶಾಲೆಗೆ ಬೇಕಾದ ಮೂಲ ಸೌಕರ್ಯ, ಅನುಕಂಪದ ಆಧಾರದ ಮೇಲೆ ಕೆಲಸ, ವರ್ಗಾವಣೆ, ಪಾಲಿಕೆಯಿಂದ ಆಗಬೇಕಾದ ಕೆಲಸ ಸೇರಿದಂತೆ ಇತ್ಯಾದಿ ಸಾರ್ವಜನಿಕ ಹಾಗೂ ವೈಯಕ್ತಿಕ ಸಮಸ್ಯೆಗಳ ಸರಮಾಲೆಯೇ ಸಚಿವರಿಗೆ ದರ್ಶನವಾಯಿತು.
ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ಪಂಚಾಯ್ತಿ ಸಿಇಓ ಸ್ವರೂಪಾ ಟಿ.ಕೆ., ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು