ಹೊಸದಿಲ್ಲಿ: ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದ 14 ವಿರೋಧ ಪಕ್ಷಗಳಿಗೆ ಸುಪ್ರೀಂಕೋರ್ಟ್ನಲ್ಲಿ ತೀವ್ರ ಹಿನ್ನಡೆಯಾಗಿದೆ. ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಕೇಂದ್ರ ತನಿಖಾ ದಳದಂತಹ (ಸಿಬಿಐ) ಕೇಂದ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ನಾಯಕರನ್ನು ಬಂಧಿಸಲು ಆಯುಧವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ವಿರೋಧ ಪಕ್ಷಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನಿರಾಸಕ್ತಿ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ವಾಸ್ತವಿಕ ಸಂದರ್ಭಗಳು ಇಲ್ಲದೆಯೇ ಸಾಮಾನ್ಯ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಹಾಗೆಯೇ ಒಂದು ವೈಯಕ್ತಿಕ ಪ್ರಕರಣದಲ್ಲಿ ಮಾತ್ರವೇ ತಾನು ಮಧ್ಯಪ್ರವೇಶ ಮಾಡಬಹುದು ಎಂದು ತಿಳಿಸಿದೆ. ಜತೆಗೆ, ರಾಜಕೀಯ ನಾಯಕರು ಸಾಮಾನ್ಯ ನಾಗರಿಕರಿಗಿಂತ ಅಧಿಕ ರಕ್ಷಣೆಯನ್ನು ಪ್ರತಿಪಾದಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.