ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ನಲ್ಲಿ ಟಿಕೆಟ್ ಗೊಂದಲ ತೀವ್ರಗೊಂಡಿದೆ. ರಾಜಾಜಿನಗರ ಕ್ಷೇತ್ರಕ್ಕೆ ಪುಟ್ಟಣ್ಣಗೆ ಟಿಕೆಟ್ ನೀಡದಂತೆ ಆಗ್ರಹಿಸಿ ಮೂಲ ಕಾಂಗ್ರೆಸ್ ಆಕಾಂಕ್ಷಿಗಳು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಮುಂದೆ ಜಮಾಯಿಸಿರುವ ರಾಜಾಜಿನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷೆಗಳು ವಲಸೆ ಬಂದವರಿಗೆ ಟಿಕೆಟ್ ನೀಡಬೇಡಿ ಎಂದು ಆಗ್ರಹಿಸಿದ್ದಾರೆ.
ಬಿಜೆಪಿಯಲ್ಲಿದ್ದ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಅವರು ರಾಜಾಜಿನಗರ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪುಟ್ಟಣ್ಣ ಪಕ್ಷ ಸೇರ್ಪಡೆ ದಿನವೇ ರಾಜಾಜಿನಗರ ಕ್ಷೇತ್ರದ ಮೂಲ ಕಾಂಗ್ರೆಸ್ ಆಕಾಂಕ್ಷಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿ ಆಕಾಂಕ್ಷಿಗಳನ್ನು ಸಮಾಧಾನಪಡಿಸಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಯಾರಿಗೂ ಟಿಕೆಟ್ ಕೊಡುವ ಭರವಸೆಯನ್ನು ಕೊಟ್ಟಿಲ್ಲ. ಪುಟ್ಟಣ್ಣ ಅವರು ಯಾವುದೇ ಶರತ್ತು ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಎಂದರು.
ಈ ನಡುವೆ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯ ಸಂದರ್ಭದಲ್ಲೂ ಟಿಕೆಟ್ ಆಕಾಂಕ್ಷಿಗಳು ದೆಹಲಿಗೂ ತೆರಳಿ ಟಿಕೆಟ್ ಬೇಡಿಕೆ ಇಟ್ಟಿದ್ದರು. ಇದೀಗ ಆಕಾಂಕ್ಷೆಗಳು ಸಿದ್ದರಾಮಯ್ಯ ಮನೆಯ ಮುಂದೆ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.