ಚಿಕ್ಕಬಳ್ಳಾಫುರ: ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ (CN Ashwath Narayan) ಅವರನ್ನು ನೇಣುಗಂಬಕ್ಕೆ ಹಾಕಬೇಕು ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ (Veerappa Moily) ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ರಾಜ್ಯದ ಶೈಕ್ಷಣಿಕ ವ್ಯವಸ್ಥೆಯನ್ನು ಅಶ್ವತ್ಥನಾರಾಯಣ ಸಂಫೂರ್ಣ ಹಾಳು ಮಾಡಿದ್ದಾರೆ. ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ. ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ. ಸರ್ಕಾರಿ ವಿವಿಗಳ ವಿದ್ಯಾರ್ಥಿಗಳ ಗುಣಮಟ್ಟದ ಬಗ್ಗೆ ಅನುಮಾನಪಡುವಂತೆ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ವಿವಿಗಳಲ್ಲಿ ಮೂಲಭೂತ ಸೌಕರ್ಯ, ಉಪನ್ಯಾಸಕರು ಹಾಗೂ ಸಿಬ್ಬಂದಿಗಳ ನೇಮಕ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ಸರ್ಕಾರಿ ಸ್ವಾಮ್ಯದ ವಿವಿಗಳಲ್ಲಿ ತಕ್ಷಣ ಉಪನ್ಯಾಸಕರ ನೇಮಕ್ಕೆ ಆಗ್ರಹ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಬಿಜೆಪಿಯ ಮಾಜಿ ಸಚಿವ ಅಶ್ವತ್ಥನಾರಾಯಣ ಮಂತ್ರಿಯಾಗಿದ್ದಾಗ ಏನೂ ಮಾಡಿಲ್ಲ. ಶಿಕ್ಷಣದ ಹೆಸರಿನಲ್ಲಿಯೂ ರಾಜಕೀಯ ಮಾಡಿದ್ದಾರೆ ಎಂದು ಮೊಯ್ಲಿ ಕಿಡಿ ಕಾರಿದ್ದಾರೆ. ವಿಧಾನಮಂಡಲ ಅಧಿವೇಶನ ನಂತರ ನಿಗಮ ಮಂಡಳಿಗಳ ನೇಮಕ ಆಗಲಿದೆ. ಪಕ್ಷಕ್ಕೆ ದುಡಿದ ಕಾರ್ಯಕರ್ತರು ಹಾಗೂ ಮುಖಂಡರ ನೇಮಕ ಆಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆಯ ಮೇಲೆ ಬೀರಲಿದೆ. ರಾಜ್ಯದಲ್ಲಿ ಈ ಬಾರಿ ಇಪ್ಪತೈದಕ್ಕೂ ಸೀಟು ಗೆಲ್ಲುತ್ತೇವೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.