ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾವು ರಂಗೇರುತ್ತಿದೆ. ಚುನಾವಣೆಯಲ್ಲಿ ಅಧಿಕಾರಿಗಳು ಸ್ಪರ್ಧಿಸುವುದು ಹೊಸದೇನಲ್ಲ. ಅದರಂತೆ ಈ ಬಾರಿ ಕೂಡ ಅನೇಕ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಚುನಾವಣೆಯಲ್ಲಿ ತಮ್ಮ ಭವಿಷ್ಯವನ್ನು ಪರೀಕ್ಷಿಸಲು ಮುಂದಾಗಿದ್ದಾರೆ. ನಾಲ್ವರು ಮಾಜಿ ಐಎಎಸ್ ಅಧಿಕಾರಿಗಳು ಹಾಗೂ ಮೂವರು ಪೊಲೀಸ್ ಅಧಿಕಾರಿಗಳು ಚುನಾವಣೆಗೆ ಸ್ಪರ್ಧೆ ಬಯಸಿ ರಾಜಕೀಯ ಪಕ್ಷಗಳ ಮೊರೆ ಹೋಗಿದ್ದಾರೆ.
ಮಾಜಿ ಐಎಎಸ್ ಅಧಿಕಾರಿಗಳಾ ಬಿಎಚ್ ಅನಿಲ್ ಕುಮಾರ್, ಎಂ ಲಕ್ಷ್ಮೀ ನಾರಾಯಣ್, ಕೆ ಶಿವರಾಮ್ ಹಾಗೂ ಶಂಭು ಕಳ್ಳೋಲಿಕರ್ (ತಮಿಳುನಾಡು ಕೇಡರ್) ಚುನಾವಣೆಗೆ ನಿಲ್ಲಲು ಸಜ್ಜಾಗಿದ್ದಾರೆ. ಮಾಜಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಕೂಡ ಇತ್ತೀಚೆಗೆ ಎಎಪಿ ಬಿಟ್ಟು ಬಿಜೆಪಿ ಸೇರಿದ್ದು, ಟಿಕೆಟ್ ನಿರೀಕ್ಷೆಯಲಿದ್ದಾರೆ. ಇವರನ್ನು ಬಿಟ್ಟು ಚಿತ್ರದುರ್ಗ ಮೂಲದ ಡಿಎಸ್ಪಿ ಮಲ್ಲೇಶಪ್ಪ ಹಾಗೂ ಇಬ್ಬರು ಸಿಪಿಐಗಳಾದ ಮಹೇಂದ್ರ ಕುಮಾರ್ ನಾಯಕ್ ಹಾಗೂ ಬಸವರಾಜ ಬೀಸನಕೊಪ್ಪ ಅವರು ಸ್ವಯಂ ನಿವೃತ್ತಿ ತೆಗೆದುಕೊಂಡು ಚುನಾವಣಾ ಕಣಕ್ಕೆ ಧುಮುಕುತ್ತಿದ್ದಾರೆ.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಿಎಚ್ ಅನಿಲ್ ಕುಮಾರ್ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇಲ್ಲಿ ಮಾಜಿ ಡಿಸಿಎಂ ಜಿ ಪರಮೇಶ್ವರ್ ಅವರು ಕಾಂಗ್ರೆಸ್ನಿಂದ ಸ್ಪರ್ಧಿಸಲಿದ್ದಾರೆ. ನಾನು ಕಳೆದ ಕೆಲವು ತಿಂಗಳಿನಿಂದ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಟಿಕೆಟ್ ಸಿಗುತ್ತೆ ಎಂಬ ವಿಶ್ವಾಸವಿದೆ ಎಂದು ಅನಿಲ್ ಕುಮಾರ್ ಹೇಳಿದ್ದಾರೆ. ಬಿಜೆಪಿ ಕೂಡ ಟಿಕೆಟ್ ನೀಡುವ ಭರವಸೆ ನೀಡಿದೆ ಎಂದು ಹೇಳಲಾಗುತ್ತಿದೆ.
1991 ಐಎಎಸ್ ಬ್ಯಾಚ್ ಅಧಿಕಾರಿಯಾಗಿರುವ ಶಂಭು ಕಳ್ಳೋಳಿಕರ್ ಅವರು ಬೆಳಗಾವಿ ಜಿಲ್ಲೆಯ ರಾಯಭಾಗ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸದಲ್ಲಿರುವ ಅವರು ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದಾರೆ. ಹೈಕಮಾಂಡ್ನಿಂದ ಟಿಕೆಟ್ ಸಿಗುವ ಭರವಸೆ ಸಿಕ್ಕಿದ್ದರೂ ಸ್ಥಳೀಯ ಮಟ್ಟದಲ್ಲಿ ಶಂಭು ಅವರ ಸ್ಪರ್ಧೆಗೆ ವಿರೋಧ ವ್ಯಕ್ತವಾಗುತ್ತಿದೆ. ಈ ಕ್ಷೇತ್ರದಲ್ಲಿ ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕೆಲ ದಿನಗಳ ಹಿಂದಷ್ಟೇ ಆಮ್ ಆದ್ಮಿ ಪಾರ್ಟಿ ತೊರೆದು ಬಿಜೆಪಿ ಸೇರಿದ್ದರು. ಬೆಂಗಳೂರಿನ ಬಸವನಗುಡಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಇಲ್ಲಿ ಬಿಜೆಪಿಯವರೇ ಆದ ರವಿ ಸುಬ್ರಹ್ಮಣ್ಯ ಅವರು ಕಳೆದ ಮೂರು ಚುನಾವಣೆಗಳಲ್ಲಿಯೂ ಜಯಿಸಿದ್ದು, ಭಾಸ್ಕರ್ ರಾವ್ಗೆ ಟಿಕೆಟ್ ಸಿಗುವುದು ಅನುಮಾನ. ಆದರೆ, ನಾನು ಬಸವನಗುಡಿ, ಚಿಕ್ಕಪೇಟೆ, ಚಾಮರಾಜಪೇಟೆ, ಜಯನಗರ ಈ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಟಿಕೆಟ್ ನೀಡಿ ಎಂದು ಕೇಳಿದ್ದೇನೆ ಎಂದು ಭಾಸ್ಕರ್ ರಾವ್ ಹೇಳಿದ್ದಾರೆ.
ಇನ್ನು, ಸಿಪಿಐ ಆಗಿದ್ದ ಮಹೇಂದ್ರ ಕುಮಾರ್ ನಾಯಕ್ ಅವರು ಎರಡು ತಿಂಗಳ ಹಿಂದೆ ಸ್ವಯಂ ನಿವೃತ್ತಿ ಪಡೆದು ವಿಜಯಪುರದ ನಾಗಠಾಣ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಕುತೂಹಲಕರ ಅಂಶ ಏನೆಂದರೆ 2010ರಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆಯಾಗುವ ಮುನ್ನ ಇವರು ತಾಲೂಕು ಪಂಚಾಯಿತಿ ಸದಸ್ಯರಾಗಿದ್ದರು. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಈ ಕ್ಷೇತ್ರದಲ್ಲಿ ಗೋವಿಂದ ಕಾರಜೋಳ ಅವರ ಪುತ್ರ ಉಮೇಶ್ ಕಾರಜೋಳ ಕೂಡ ಆಕಾಂಕ್ಷಿಯಾಗಿದ್ದಾರೆ. ಮತ್ತೋರ್ವ ಸಿಪಿಐ ಬಸವರಾಜ ಬೀಸನಕೊಪ್ಪ ಸಹ ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದು, ಅಥಣಿಯಿಂದ ಸ್ಪರ್ಧಿಸಲು ರೆಡಿಯಾಗಿದ್ದಾರೆ. ಗಣಿಧಣಿ ಜನಾರ್ದನ ರೆಡ್ಡಿ ಅವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧಿಸಲಿದ್ದಾರೆ.