ಹೊಸದಿಲ್ಲಿ: ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗಾಯಕ್ಕೆ ತುತ್ತಾಗಿರುವ ಲಖನೌ ಸೂಪರಗ್ ಜಯಂಟ್ಸ್ ನಾಯಕ ಕೆ.ಎಲ್ ರಾಹುಲ್ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಿಂದ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಇಶಾನ್ ಕಿಶನ್ ಆಯ್ಕೆಯ ಜೊತೆಗೆ ಮುಖೇಶ್ ಚೌಧರಿ, ಸೂರ್ಯಕುಮಾರ್ ಯಾದವ್ ಹಾಗೂ ಋತುರಾಜ್ ಗಾಯಕ್ವಾಡ್ ಅವರನ್ನು ಮೀಸಲು ಆಟಗಾರರನ್ನಾಗಿ ಬಿಸಿಸಿಐ ಆಯ್ಕೆ ಮಾಡಿದೆ. ಅಂದಹಾಗೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯ ಜೂನ್ 7 ರಿಂದ 11ರವರೆಗೆ ಲಂಡನ್ ದಿ ಓವಲ್ ಮೈದಾನದಲ್ಲಿ ನಡೆಯಲಿದೆ.
ಈ ಮಹತ್ವದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಗಾಯಾಳುಗಳ ಸಮಸ್ಯೆ ಕಾಡುತ್ತಿದೆ. ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ಸೇರಿ ಪ್ರಮುಖ ಕೀ ಆಟಗಾರರು ಗಾಯದಿಂದಾಗಿ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ಗೆ ಅಲಭ್ಯರಾಗಿದ್ದಾರೆ. ಇದೀಗ ಕೆ.ಎಲ್ ರಾಹುಲ್ ಹೊರ ನಡೆದಿರುವುದು ಭಾರತ ತಂಡಕ್ಕೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ.
ದೇಶಿ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ತೋರಿರುವ ವೃದ್ಧಿಮಾನ್ ಸಹಾ, ಸರ್ಫರಾಝ್ ಖಾನ್ ಹಾಗೂ ಅಭಿಮನ್ಯು ಈಶ್ವರನ್ ಅವರನ್ನು ಕಡೆಗಣಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯಕ್ಕೆ ಇಶಾನ್ ಕಿಶನ್ ಅವರನ್ನು ಎರಡನೇ ವಿಕೆಟ್ ಕೀಪರ್ ಆಗಿ ಬಿಸಿಸಿಐ ಆಯ್ಕೆ ಮಾಡಿರುವುದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.