ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಅಕ್ರಮ ಅದಿರು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ, ಕಾಂಗ್ರೆಸ್ ಶಾಸಕ ನಾಗೇಂದ್ರ ಸೇರಿದಂತೆ 16 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದೆ.
ಅರ್ಜಿ ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಲಾಗಿದೆ. ಗಣಿ ಮತ್ತು ಖನಿಜ ಅಭಿವೃದ್ಧಿ ನಿಯಂತ್ರಣಗಳ ಕಾಯ್ದೆ 1957 ಅಡಿ, ಸೆಕ್ಷನ್ 21 ಮತ್ತು 23 ಜೊತೆಗೆ 4(1), 4(1ಎ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ತಿಳಿಸಿದೆ. ವಿಧಾನಸಭೆ ಚುನಾವಣೆಗೆ ಜನಾರ್ದನ ರೆಡ್ಡಿ ಕೊಪ್ಪಳದ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದ್ದು, ಇದೀಗ ಕೋರ್ಟ್ ಆದೇಶದಿಂದ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ ಎಂದು ಮಾತು ಕೇಳಿ ಬಂದಿದೆ.