ಹೊಸದಿಲ್ಲಿ: ಕೋರ್ಟ್ ಆವರಣದಲ್ಲಿಯೇ ಗುಂಡಿನ ದಾಳಿ ನಡೆದ ಮತ್ತೊಂದು ಪ್ರಕರಣ ರಾಜಧಾನಿ ದಿಲ್ಲಿಯಲ್ಲಿ ವರದಿಯಾಗಿದೆ. ಸಾಕೇತ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ವಕೀಲನ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋರ್ಟ್ ಆವರಣದಲ್ಲಿ ಮಹಿಳೆ ಮೇಲೆ ನಾಲ್ಕು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ. ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋರ್ಟ್ನಲ್ಲಿ ಗುಂಡಿನ ದಾಳಿ ನಡೆದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೂಲಗಳ ಪ್ರಕಾರ ಆರೋಪಿಯು ಕ್ರಿಮಿನಲ್ ಹಿನ್ನೆಲೆಯುಳ್ಳವನಾಗಿದ್ದಾನೆ.
ಹಣಕಾಸು ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗಾಗಿ ಮಹಿಳೆ, ಸಾಕೇತ್ ನ್ಯಾಯಾಲಯಕ್ಕೆ ತೆರಳಿದ್ದರು. ಆಗ ವಕೀಲನ ಸೋಗಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಆಕೆಯ ಮೇಲೆ ಬಂದೂಕಿನಿಂದ ದಾಳಿ ನಡೆಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಲು ಸಾಲು ಪ್ರಕರಣಗಳು
ನೈಋತ್ಯ ದಿಲ್ಲಿಯ ದ್ವಾರಕಾದಲ್ಲಿ ಕೆಲವು ದಿನಗಳ ಹಿಂದಷ್ಟೇ ವಕೀಲರೊಬ್ಬರನ್ನು ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ದಾಳಿಕೋರರು ವಕೀಲರ ವೇಷದಲ್ಲಿ ನ್ಯಾಯಾಲಯದ ಆವರಣಕ್ಕೆ ಪ್ರವೇಶಿಸಿದ್ದರು.