ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಜುಲೈ 17 ರಂದು ರಾಷ್ಟ್ರೀಯ ನಾಯಕರಿಂದ ಚಾಲನೆ ಕೊಡಿಸಲಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಮನೆಯೊಡತಿ ಖಾತೆಗೆ 2 ಸಾವಿರ ಹಣ ಜಮೆ ಯೋಜನೆಗೆ ಜುಲೈ 17 ರಂದು ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಷ್ಟ್ರೀಯ ನಾಯಕರಿಂದ ಚಾಲನೆ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವಂತೆ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿಗಳು ಅತ್ತೆಯಾಗಬೇಕ ಅಥವಾ ಸೊಸೆಯಾಗಬೇಕೆ ಎನ್ನುವ ವಿಚಾರವನ್ನು ಅರ್ಜಿಯಲ್ಲಿ ನಮೂದಿಸಿ ಸಲ್ಲಿಸಬೇಕು. ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿದಾರರಾಗುರತಕ್ಕದ್ದಲ್ಲ ಎಂದಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಯೋಜನೆ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ, ಎಪಿಎಲ್, ಬಿಪಿಎಲ್ ಅಂತ್ಯೋದಯ ಕಾರ್ಡ್ ನವರು ಈ ಯೋಜನೆ ಫಲಾನುಭವಿಗಳಾಗಿರುತ್ತಾರೆ. ಅರ್ಜಿಸಲ್ಲಿಕೆಗೆ ಯಾವುದೆ ಕೊನೆಯ ದಿನಾಂಕ ಇರುವುದಿಲ್ಲ.
ಮೊದಲನೆಯದಾಗಿ ಈಗಾಗಲೇ ಪಡಿತರ ಕಾರ್ಡ್ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ಅರ್ಜಿ ಸಲ್ಲಿಕೆಯ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು SMS ಮೂಲಕ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಗ್ರಾಮಾಂತರ ಪ್ರದೇಶದಲ್ಲಿರುವವರು ತಾವು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳಲ್ಲಿ ಅರ್ಜಿ ಹಾಕಬಹುದು. ಪರ್ಯಾಯವಾಗಿ “ಪ್ರಜಾಪ್ರತಿನಿಧಿ” (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ಮಹಿಳೆಯರು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು
ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ-ಒನ್, ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು.
ಯೋಜನೆಯಡಿ ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಂಬರ್ ಜೋಡಣೆಯಾಗಿರುವ (ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿಯನ್ನು ಫಲಾನುಭವಿಗಳು ಕೊಡಬೇಕು. ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು ಎಂದು ಹೇಳಿದರು.
ಹೆಚ್ಚಿನ ಮಾಹಿತಿ ಈ ಕೆಳಕಂಡ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದ :
8147500500 ಮೊಬೈಲ್ ಸಂಖ್ಯೆ ಗೆ ಎಸ್ ಎಮ್ ಎಸ್ ಮಾಡಿ ಪರಿಶೀಲನೆ ಮಾಡಬಹುದು. 1902 ಹೆಲ್ಪ್ ಲೈನ್ ಗೆ ಕರೆ ಮಾಡಿ ಏನಾದರು ಸಮಸ್ಯೆ ಇದ್ದರೆ ಬಗೆಹರಿಕೊಳ್ಳಬಹುದು ಎಂದು ತಿಳಿಸಿದ್ದಾರೆ.