ಬೆಂಗಳೂರು:- ಮಾಜಿ ಸಿಎಂ ಕುಮಾರಸ್ವಾಮಿ ಗ್ಯಾರಂಟಿ ಟೀಕಿಸೋ ಭರದಲ್ಲಿ ಆಡಿದ ಮಾತು ಬಿಜೆಪಿ-ಜೆಡಿಎಸ್ಗೆ ದುಬಾರಿ ಆಗ್ತಿದೆ. ಗ್ಯಾರಂಟಿಯಿಂದ ನನ್ನ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಎಚ್ಡಿಕೆ ನೀಡಿರುವ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ಇದೇ ವಿಚಾರವಾಗಿ ಕಾಂಗ್ರೆಸ್ ಮತ್ತೊಂದೆ ಹೆಜ್ಜೆ ಮುಂದೆ ಹೋಗಿ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮಾಜಿ ಸಂಸದ ಉಗ್ರಪ್ಪ, ಮಾಜಿ ಮೇಯರ್ ರಾಮಚಂದ್ರಪ್ಪ ಅವರು ನಿನ್ನೆ ಚುನಾವಣಾ ಆಯೋಗಕ್ಕೆ ದೂರು ನೀಡಿದರು. ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹೇಳಿಕೆಗೆ ಸಮಜಾಯಿಷಿ ನೀಡಿ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಅಲ್ಲದೇ ಕ್ಷಮೆ ಯಾಚಿಸುವ ಮೂಲಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಕುಮಾರಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದೆ.
ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಪಡೆ ನಿಗಿನಿಗಿ ಅಂತಿದೆ. ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಆದಿಯಾಗಿ ಸಚಿವರು, ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದಾರೆ. ದಾರಿ ತಪ್ಪಿದ್ದಾರೆ ಅಂದ್ರೆ ಏನರ್ಥ ಎಂದು ಪ್ರಶ್ನಿಸಿದ್ದಾರೆ. ಇನ್ನು ಕುಮಾರಸ್ವಾಮಿ ಹೇಳಿಕೆಯನ್ನು ಮಹಿಳಾ ಆಯೋಗ ಖಂಡಿಸಿದೆ. ಅಲ್ಲದೇ ಈ ಸಂಬಂಧ ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಇದೀಗ ನೋಟಿಸ್ ಸಹ ಜಾರಿ ಮಾಡಿದೆ.