ಮಂಡ್ಯ : ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಹೋದರ ಪುತ್ರ ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಗುರುವಾರ ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರ್ಪಡೆಯಾದರು.
ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಗುರುಚರಣ್ ನಿವಾಸಕ್ಕೆ ಗುರುವಾರ ಬೆಳಿಗ್ಗೆ 9ಗಂಟೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಎಸ್.ಗುರುಚರಣ್ ಹಾಗೂ ನೂರಾರು ಬೆಂಬಲಿಗರನ್ನು ಜೆಡಿಎಸ್ ಪಕ್ಷಕ್ಕೆ ಸ್ವಾಗತಿಸಿದರು.
ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುರುಚರಣ್ ಕುಟುಂಬಕ್ಕೆ ಅವಮಾನ ಆಗಿದೆ. 5 ದಶಕಗಳ ಕಾಲ ಪಕ್ಷಕ್ಕಾಗಿ ದುಡಿದ ಅವರ ಮನೆತನವನ್ನು ಕಾಂಗ್ರೆಸ್ ಪಕ್ಷದ ನಾಯಕರು ಕಡೆಗಣನೆ ಮಾಡಿದ್ದಾರೆ. ಬದಲಾದ ರಾಜಕಾರಣದಿಂದ ಇಂದು ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಗುರುಚರಣ್ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದರಿಂದ ಚುನಾವಣೆಯಲ್ಲಿ ಶಾಸಕ ಡಿ.ಸಿ.ತಮ್ಮಣ್ಣರ ಗೆಲುವಿಗೆ ಮತ್ತಷ್ಟು ಬಲ ಬಂದಂತಾಗಿದ್ದು, ಮುಂದಿನ ದಿನಗಳಲ್ಲಿ ಗುರುಚರಣ್ ಮತ್ತು ಬೆಂಬಲಿಗರನ್ನು ಎಲ್ಲಾ ರೀತಿಯ ಗೌರವಯುತವಾದ ಸ್ಥಾನ ಮಾನಗಳನ್ನು ನೀಡಿ ನಡೆಸಿಕೊಳ್ಳುವುದು ಎಂದು ಭರವಸೆ ನೀಡಿದರು.
ವರದಿ : ಗಿರೀಶ್ ರಾಜ್ ಮಂಡ್ಯ