ಬೆಂಗಳೂರು:- ರಸ್ತೆಯಲ್ಲಿ ದೇವಸ್ಥಾನ ನಿರ್ಮಿಸಿದರೆ ಜನರು ಏನು ಮಾಡಬೇಕು? ಎಂದು ಹೈಕೋರ್ಟ್ ಅಸಮಾಧಾನ ಹೊರ ಹಾಕಿದೆ.
ಸುಂಕದಕಟ್ಟೆ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಸ್ಥಾನ ನಿರ್ಮಾಣ ಮಾಡಿರುವ ಸಂಬಂಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಸಾರ್ವಜನಿಕ ರಸ್ತೆಯಲ್ಲಿ ಧಾರ್ಮಿಕ ಕೇಂದ್ರ ನಿರ್ಮಾಣ ಮಾಡಿದರೆ ಜನ ಏನು ಮಾಡಬೇಕು? ಎಂದು ಮೌಖಿಕವಾಗಿ ಪ್ರಶ್ನಿಸಿದೆ.
ರಸ್ತೆ ಒತ್ತುವರಿ ಮಾಡಿ ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರು ದೇವಸ್ಥಾನ ನಿರ್ಮಿಸುತ್ತಿರುವುದಕ್ಕೆ ಆಕ್ಷೇಪಿಸಿ ಸುಂಕದಕಟ್ಟೆಯ ನಿವಾಸಿ ಸಿ.ಹೊನ್ನಯ್ಯ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಸ್ವಾತಂತ್ರ ಪ್ರಾಧಿಕಾರರಿಂದ ಸ್ಪಷ್ಟವಾದ ವರದಿ ಪಡೆಯುವುದು ಸೂಕ್ತ ಎಂದೆನಿಸಿದೆ. ಸಂಬಂಧಿತ ಎಲ್ಲರಿಗೂ ನೋಟಿಸ್ ಜಾರಿ ಮಾಡಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ನೇಮಿಸಿದ ಭೂ ದಾಖಲೆಗಳ ಉಪ ನಿರ್ದೇಶಕರು(ಡಿಡಿಎಲ್ಆರ್) ತಾಂತ್ರಿಕ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ವಾಸ್ತವಿಕ ವರದಿಯನ್ನು ಮೂರು ವಾರಗಳಲ್ಲಿ ಸಲ್ಲಿಸಬೇಕು. ನೋಟಿಸ್ ಪಡೆದ ಸಂಬಂಧಿತರು ಸೂಕ್ತ ದಾಖಲೆಗಳನ್ನು ಡಿಡಿಎಲ್ಆರ್ ಅವರಿಗೆ ನೀಡಬೇಕು. ಡಿಡಿಎಲ್ಆರ್ ಅವರು ಸಂಬಂಧಿತ ಎಲ್ಲ ಸಾರ್ವಜನಿಕ ದಾಖಲೆಗಳನ್ನು ತರಿಸಿಕೊಂಡು ಪರಿಶೀಲಿಸಿ ಸಲ್ಲಿಸಬೇಕು ಎಂದು ಪೀಠ ತಿಳಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸರಕಾರಿ ರಸ್ತೆ ಒತ್ತುವರಿ ಮಾಡಿ ದೇವಸ್ಥಾನ ನಿರ್ಮಿಸುತ್ತಿರುವುದಲ್ಲದೇ ಓಡಾಟಕ್ಕೆ ರಸ್ತೆ ನಿರ್ಬಂಧಿ ಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು