ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ವ್ಯವಸ್ಥೆ ಏಕಿಲ್ಲ? ಎಂದು ರಾಜ್ಯ ಸರ್ಕಾರವನ್ನು ಬೆಂಗಳೂರಿನ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್ ಕಮಲ್ ಅವರಿದ್ದ ನ್ಯಾಯಪೀಠ ರಾಜ್ಯ ಸರ್ಕಾರವನ್ನು ಕಟುವಾಗಿ ಪ್ರಶ್ನಿಸಿದೆ.
ವಿಚಾರಣೆ ವೇಳೆ ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿರುವ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು ರಾಜ್ಯದ ಸುಮಾರು ನಾಲ್ಕು ಸಾವಿರ ಶಾಲೆಗಳಲ್ಲಿ ಕುಡಿಯುವ ನೀರು, ಹೆಣ್ಣು ಮಕ್ಕಳಿಗೆ ಶೌಚಾಲಯ, ತಡೆಗೋಡೆ, ಆಟದ ಮೈದಾನದ ವ್ಯವಸ್ಥೆ ಇಲ್ಲ ಎಂಬ ಅಂಶವನ್ನು ದಾಖಲೆಗಳ ಸಮೇತ ನ್ಯಾಯಪೀಠಕ್ಕೆ ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಹಲವು ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬುದು ಗಂಭೀರ ವಿಷಯ. ಈ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಲಾಗಿದೆ?. ಯಾವಾಗ ಈ ಶಾಲೆಗಳನ್ನು ಆರಂಭಿಸಲಾಗಿದೆ. ಶಿಕ್ಷಕರು ಇಲ್ಲ, ಕೊಠಡಿಗಳು ಇಲ್ಲ ಎಂದರೆ ಹೇಗೋ ಹೊಂದಾಣಿಕೆ ಮಾಡಿಕೊಳ್ಳಬಹುದು. ಆದರೆ ಹೆಣ್ಣು ಮಕ್ಕಳಿಗೆ ಶೌಚಾಲಯವಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂಬುದು ಗಂಭೀರ ವಿಚಾರವಲ್ಲವೇ ಎಂದು ಪ್ರಶ್ನಿಸಿತು.