ಬೆಂಗಳೂರು;- ನನ್ನ ವಿರುದ್ಧ ಕೇಳಿಬಂದ ಆರೋಪ ಸಾಬೀತಾದರೆ ಹುದ್ದೆ ತೊರೆಯುತ್ತೇನೆ ಎಂದು ಸಿ ಎಸ್ ಷಡಕ್ಷರಿ ಹೇಳಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ತಮ್ಮ ವರ್ಗಾವಣೆ ಕುರಿತಂತೆ ಮಾತನಾಡಿದ ಅವರು, ನನ್ನ ವಿರುದ್ಧ ಕೇಳಿಬಂದಿರುವ ಆರೋಪಗಳ ಅಧಿಕೃತ ದಾಖಲಾತಿ ತೋರಿಸಲಿ. ಒಂದೊಮ್ಮೆ ತಪ್ಪು ಎಸಗಿರುವುದು ಸಾಬೀತಾದರೆ ಹುದ್ದೆಯನ್ನೇ ತೊರೆಯುತ್ತೇನೆ ಎಂದು ಸವಾಲು ಕೂಡಾ ಹಾಕಿದ್ದಾರೆ. ಈ ವರ್ಗಾವಣೆ ಬಗ್ಗೆ ಮುಖ್ಯಮಂತ್ರಿ ಅವರನ್ನ ಭೇಟಿಯಾಗಿ ಮಾತನಾಡುತ್ತೇನೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಕ್ಷರಿ ಅವರನ್ನು ಕೋಲಾರ ಜಿಲ್ಲೆಯಲ್ಲಿ ಖಾಲಿ ಇದ್ದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆಗೊಳಿಸಿ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ (ಆಡಳಿತ ಮತ್ತು ಮುಂಗಡಗಳು ವಿಭಾಗ) ಆದೇಶಿಸಿದ್ದರು. ಸರ್ಕಾರದ ಈ ಆದೇಶ ಹೊರ ಬೀಳುತ್ತಿದ್ದಂತೆ ಬೆನ್ನಲ್ಲೇ ಪರ-ವಿರೋಧ ಬಗ್ಗೆ ಚರ್ಚೆಯಾಗುತ್ತಿದೆ.
ಈ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ತಮ್ಮ ಮೇಲೆ ಬಂದಿರುವ ಆರೋಪಗಳ ಬಗ್ಗೆ ತನಿಖೆ ನಡೆಸಿ ಅಲ್ಲಿನ ಜಿಲ್ಲಾಧಿಕಾರಿಗಳು ವರದಿ ನೀಡಿದ್ದಾರೆ. ವರದಿಯಲ್ಲಿ ನನ್ನ ಹೆಸರಿಲ್ಲ. ಹಗರಣದ ಬಗ್ಗೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿದ ಮೇಲೆ ಸತ್ಯಾಸತ್ಯತೆ ಹೊರ ಬರಲಿದೆ ಎಂದರು.