ಬೆಂಗಳೂರು:- ಕಾನೂನು ಕೈಗೆತ್ತಿಕೊಂಡರೆ ಸುಮ್ಮನೆ ಕೂರಲು ಆಗಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂದರು.
ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ ಎಂದಿರುವ ಸಿದ್ದರಾಮಯ್ಯ, 2022ರ ಮಾ.3ರಂದು ಹೈಕೋರ್ಟ್ ಪ್ರತಿಭಟನೆ, ಧರಣಿಗಳನ್ನು ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಾತ್ರ ಮಾಡಬೇಕು. ಇದನ್ನು ಸರ್ಕಾರ ಖಾತರಿಪಡಿಸಬೇಕು ಎಂದು ಸ್ಪಷ್ಟ ಆದೇಶ ನೀಡಿದೆ. ಹೀಗಿದ್ದರೂ ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಯಾವುದೇ ಸಂಘಟನೆಯಿರಲಿ ಅಥವಾ ಖಾಸಗಿ ಸಂಸ್ಥೆಗಳಿರಲಿ, ಯಾರೇ ವ್ಯಕ್ತಿಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.