ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ರೈಲು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಲ್ಲಿಯವರೆಗೆ 15 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಅವಘಡದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ ಸಂತಾಪ ಸೂಚಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು, ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಕಾಂಚನ್ ಜುಂಗಾ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾಗಿ ಹಲವಾರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಹೇಳಿದ್ದಾರೆ. ಇದೇ ವೇಳೆ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದರು
ಅಪಘಾತದ ದೃಶ್ಯಗಳನ್ನು ನೋಡಿದಾಗ ಬಹಳ ಬೇಸರವಾಗುತ್ತದೆ. ಸಂತ್ರಸ್ತರ ಕುಟುಂಬಗಳೊಂದಿಗೆ ನಾವಿದ್ದೇವೆ. ಈ ದುಃಖದ ಸಮಯದಲ್ಲಿ, ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇವೆ. ಇನ್ನು ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ. ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಇದೇ ವೇಳೆ ಖರ್ಗೆ ಒತ್ತಾಯಿಸಿದರು