ಬೆಂಗಳೂರು: ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಶಾಸಕರಾದ ಟಿ ಎ ಶರವಣ ಅವರು ಭಾಗಿಯಾಗಿದ್ದರು.
ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದರು.
ಆರ್ಥಿಕ ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘನ ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಕ್ರೀಡಾ ಸಚಿವ ನಾಗೇಂದ್ರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.