ಅರಬ್ಬೀ ಸಮುದ್ರದಲ್ಲಿ ಬಿಪರ್ಜಾಯ್ ಚಂಡಮಾರುತ ಪ್ರಭಾವದ ಹಿನ್ನೆಲೆ, ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂ.11 ಮತ್ತು ಜೂ.12ರಂದು ವ್ಯಾಪಕ ಮಳೆಯಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯಾಗಲಿದ್ದು,
ಚಿತ್ರದುರ್ಗ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ನೀಡಲಾಗಿದೆ. ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆವರೆಗೆ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಹೊಳೆಹೊನ್ನೂರು, ಚನ್ನರಾಯಪಟ್ಟಣದಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ. ರಾಜ್ಯದಲ್ಲಿಅತೀ ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಷಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ:
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಡಲ ತೀರದಲ್ಲಿ 2.3 ರಿಂದ 3.2 ಮೀ. ಎತ್ತರದ ಅಲೆಗಳು ಮಂಗಳೂರಿನಿಂದ ಕಾರವಾರದ ತನಕ ಅಪ್ಪಳಿಸಲಿವೆ. ಜೂ. 8 ರಿಂದ 10 ರ ತನಕ ಗಾಳಿ, ಮಿಂಚು, ಗುಡುಗು, ಸಿಡಿಲು ಸಹಿತ ಗಂಟೆಗೆ 30 ರಿಂದ 40ಕಿ. ಮೀ. ವೇಗದಲ್ಲಿ ಉಡುಪಿ ಸಹಿತ ಕರಾವಳಿ ಕರ್ನಾಟಕದ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಜೂ. 11, 12 ರಂದು 64.5 ರಿಂದ 115.5 ಮಿ. ಮೀ. ಮಳೆಯು ಗಾಳಿ, ಮಿಂಚು, ಗುಡುಗು, ಸಿಡಿಲು ಸಹಿತವಾಗಿ ಬೀಳಲಿದೆ.
ವಾಯುಭಾರ ಕುಸಿತ: ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಅದರಂತೆ, ಜೂ.11 ರವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.