ಬ್ರಿಸ್ಬೇನ್: ವೂಲೂಂಗಬ್ಬಾದ ಬ್ರಿಸ್ಬೇನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮಳೆ ಆಟವೇ ಮುಂದುವರಿದಿದ್ದು, ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇದರಿಂದ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾದಿ ಕೊಂಚ ಸುಗಮವಾದಂತಾಗಿದೆ. ಸದ್ಯ ಮೂರು ಪಂದ್ಯಗಳ ಪೈಕಿ 1-1ರಲ್ಲಿ ಸರಣಿ ಸಮಬಲಗೊಂಡಿದೆ. ಉಳಿದ 2 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದರೆ, WTC ಫೈನಲ್ ತಲುಪಲಿದೆ.
4ನೇ ದಿನದ ಅಂತ್ಯಕ್ಕೆ ಭಾರತ 9 ವಿಕೆಟ್ ನಷ್ಟಕ್ಕೆ 252 ರನ್ ಗಳಿಸಿ, ಫಾಲೋ ಆನ್ ಭೀತಿಯಿಂದ ಪಾರಾಗಿತ್ತು. ಕೊನೆಯ ಕ್ರೀಸ್ ಆರಂಭಿಸಿದ ಭಾರತ ಮೊದಲ ಇನ್ನಿಂಗ್ಸ್ನಲ್ಲಿ 260 ರನ್ಗಳಿಗೆ ಆಲೌಟ್ ಆಯಿತು. ಬಳಿಕ 185 ರನ್ಗಳ ಮುನ್ನಡೆಯೊಂದಿಗೆ ತನ್ನ 2ನೇ ಇನ್ನಿಂಗ್ಸ್ ಆರಂಭಿಸಿದ ಆಸೀಸ್ 7 ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ಭಾರತಕ್ಕೆ 275 ರನ್ಗಳ ಗುರಿ ನೀಡಿತು. ಇತ್ತ ಭಾರತ 2.1 ಓವರ್ಗಳಲ್ಲಿ 8 ರನ್ ಗಳಿಸುತ್ತಿದ್ದಂತೆ ಮಳೆ ಕಾಟ ಶುರುವಾಯಿತು. ನಿರಂತರವಾಗಿ ಸುರಿಯುತ್ತಿದ್ದರಿಂದ ಪಂದ್ಯ ಡ್ರಾನತ್ತ ತಿರುಗಿತು.
ಭಾರತವನ್ನು ಕಾಪಾಡಿದ ಆಕಾಶ್ ದೀಪ್:
ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 445 ರನ್ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತ್ಯುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ 3ನೇ ದಿನ ಪ್ರಮುಖ 4 ವಿಕೆಟ್ಗಳನ್ನು ಕಳೆದುಕೊಂಡು 51 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿತ್ತು. 4ನೇ ದಿನ ಆರಂಭಿಕ ಕೆ.ಎಲ್ ರಾಹುಲ್ 84 ರನ್, ರವೀಂದ್ರ ಜಡೇಜಾ 77 ರನ್ಗಳ ಕೊಡುಗೆ ನೀಡಿದರೂ, ಫಾಲೋ ಆನ್ಗೆ ತುತ್ತಾಗುವ ಭೀತಿಯಲ್ಲಿತ್ತು. ಆದ್ರೆ ಕೊನೇ ಕ್ಷಣದಲ್ಲಿ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದ ಆಕಾಶ್ ದೀಪ್,
ಪ್ಯಾಟ್ ಕಮ್ಮಿನ್ಸ್ ಅವರ ಪಾಲಿನ 21ನೇ ಓವರ್ನ 4ನೇ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಟೀಂ ಇಂಡಿಯಾವನ್ನು ಫಾಲೋ ಆನ್ನಿಂದ ಕಾಪಾಡಿದರು. ಜಸ್ಪ್ರೀತ್ ಬುಮ್ರಾ ಸಹ ಬ್ಯಾಟಿಂಗ್ನಲ್ಲಿ ನೆರವಾದರು. ಟೀಂ ಇಂಡಿಯಾ ಪರ ಕೆ.ಎಲ್ ರಾಹುಲ್ 84 ರನ್ (139 ಎಸೆತ, 8 ಬೌಂಡರಿ), ರವೀಂದ್ರ ಜಡೇಜಾ 77 ರನ್ (123 ರನ್, 7 ಬೌಂಡರಿ, 1 ಸಿಕ್ಸರ್), ರೋಹಿತ್ ಶರ್ಮಾ 10 ರನ್, ನಿತೀಶ್ ಕುಮಾರ್ ರೆಡ್ಡಿ 16 ರನ್ ಗಳಿಸಿದ್ರೆ ಉಳಿದವರು ಅಲ್ಪಮೊತ್ತಕ್ಕೆ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ಆಕಾಶ್ ದೀಪ್ 31 ರನ್ ಗಳಿಸಿದ್ರೆ, ಜಸ್ಪ್ರೀತ್ ಬುಮ್ರಾ 10 ರನ್ ಗಳಿಸಿದರು.