ಬೆಂಗಳೂರು: ಕೇಂದ್ರ ಬಜೆಟ್ನಲ್ಲಿ (Union Budget) ಕರ್ನಾಟಕಕ್ಕೆ (Karnataka) ಆಗಿರುವ ಅನ್ಯಾಯವನ್ನು ಖಂಡಿಸಿ ರಾಜ್ಯ ಸರ್ಕಾರ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ (Niti Aayog) ಸಭೆಯನ್ನು ಬಹಿಷ್ಕರಿಸಲು ನಿರ್ಧರಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಕೇಂದ್ರ ಸರ್ಕಾರದ ವಿರುದ್ಧ ದೀರ್ಘವಾದ ಪೋಸ್ಟ್ ಪ್ರಕಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೋಸ್ಟ್ನಲ್ಲಿ ಏನಿದೆ?
ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ.
ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ.
ಇಂದು ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ್ವಾಸವೇ ಹೊರಟುಹೋಗಿದೆ.