ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಮೇ 10ರಂದು ಮತದಾನ (Voting) ಪ್ರಕ್ರಿಯೆ ಮುಗಿದಿದ್ದು ಮೇ 13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಇನ್ನು ಮತದಾನದ ದಿನದಂದು ಅನೌನ್ಸ್ ಆದ ಎಕ್ಸಿಟ್ ಪೋಲ್ ಫಲಿತಾಂಶ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಎಕ್ಸಿಟ್ ಪೋಲ್ ಫಲಿತಾಂಶದಲ್ಲಿ ಕಾಂಗ್ರೆಸ್ ಬಹುಮತ ಬಂದಿದ್ದು ಕಾಂಗ್ರೆಸ್ ಪಾಳೆಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರನ್ನು ಮಾಜಿ ಡಿಸಿಎಂ ಜಿ.ಪರಮೇಶ್ವರ್(Dr G Parameshwar) ಭೇಟಿ ಮಾಡಿ ಚರ್ಚೆ ತಂತ್ರಕಾರಿಕೆ ಹೆಣೆಯಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.
ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಜಿ.ಪರಮೇಶ್ವರ್ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿ ಹಿಂದಿರುಗಿದ್ದಾರೆ. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಪರಮೇಶ್ವರ್, ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಚುನಾವಣೆಯಲ್ಲಿ ಕನಿಷ್ಠ 130 ಸ್ಥಾನಗಳನ್ನ ನಾವು ಗೆಲ್ಲುತ್ತೇವೆ. ಇದನ್ನು ನಾನು ಖಚಿತವಾಗಿಯೇ ಹೇಳುತ್ತಿದ್ದೇವೆ. ಜಿಲ್ಲಾವಾರು ಮಾಹಿತಿ ಪಡೆದುಕೊಂಡಿದ್ದೇವೆ. ನಮ್ಮ ಸ್ವಂತ ಬಲದ ಮೇಲೆ ಸರ್ಕಾರ ರಚಿಸುತ್ತೇವೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.