ದೇಶ ವಿರೋದಿ ಚಟುವಟಿಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪ್ರಮುಖ ವಿರೋಧ ಪಕ್ಷ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ‘ಪಾಕಿಸ್ತಾನ್ ತೆಹ್ರಿಕ್-ಎ-ಇನ್ಸಾಫ್’ (ಪಿಟಿಐ) ಪಕ್ಷವನ್ನು ನಿಷೇಧ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಸೋಮವಾರ ತಿಳಿಸಿದೆ.
‘ಪಿಟಿಐ ಪಕ್ಷವು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಹೀಗಾಗಿ ಫೆಡರಲ್ ಸರ್ಕಾರವು (ಕೇಂದ್ರ ಸರ್ಕಾರ) ಅದನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಂಡಿದೆ’ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತಾವುಲ್ಲಾ ತರಾರ್ ಹೇಳಿದ್ದಾರೆ.
‘ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದಕ್ಕೆ ಸ್ಪಷ್ಟ ಸಾಕ್ಷ್ಯಗಳಿದ್ದು, ತೆಹ್ರಿಕ್-ಎ-ಇನ್ಸಾಫ್ ಪಕ್ಷವನ್ನು ನಿಷೇಧಿಸುವ ಪ್ರಕ್ರಿಯೆಯನ್ನು ಸರ್ಕಾರ ಪ್ರಾರಂಭಿಸಲಿದೆ’ ಎಂದು ತರಾರ್ ತಿಳಿಸಿದ್ದಾರೆ.
ಅಕ್ರಮ ಮದುವೆ ಸೇರಿ ಹಲವು ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ 71 ವರ್ಷದ ಇಮ್ರಾನ್ ಖಾನ್ ಅವರು ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿದ್ದಾರೆ.