ಹುಬ್ಬಳ್ಳಿ: ಅಂಗನವಾಡಿ ಕೇಂದ್ರಗಳಿಂದ ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಸಬೇಕಾದ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹುಲಿಗೆವ್ವ ಕುಕನೂರು ( ಡಿಡಿ) ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ( ಸಿಡಿಪಿಓ) ಮುತ್ತಣ್ಣ ಸಿ.ಎ. ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಇಬ್ಬರೂ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ. ಇಲಾಖೆ ವಿಚಾರಣೆ ಬಾಕಿಯಿರಿಸಿ, ಇಬ್ಬರನ್ನೂ ಅಮಾನತು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪಕಾರ್ಯದರ್ಶಿ ಬಲರಾಮ ಆದೇಶ ಹೊರಡಿಸಿದ್ದಾರೆ.
‘ಸರ್ಕಾರ ವಿತರಿಸುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ಧಾರವಾಡದ ಲಕಮನಹಳ್ಳಿ ಎಂಎಸ್ಪಿಸಿ ಗೋದಾಮಿನಿಂದ ಅಂಗನವಾಡಿ ಕೇಂದ್ರಗಳಿಗೆ ವಿತರಿಸದೆ, ಅಕ್ರಮವಾಗಿ ಗಬ್ಬೂರು ಸಮೀಪದ ಗೋದಾಮಿನಲ್ಲಿ ಸಂಗ್ರಹಿಸಿದ್ದಾರೆ. ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯಡಿ ಅಂಗನವಾಡಿ ಕೇಂದ್ರದ ಫಲಾನು ಭವಿಗಳಿಗೆ ಪೌಷ್ಟಿಕ ಆಹಾರ ಒದಗಿಸಲು ವಿಫಲವಾಗಿದ್ದಾರೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.
