ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ.
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇದೇ ಪ್ರಕರದಲ್ಲಿ ಅರೆಸ್ಟ್ ಆಗಿದ್ದು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ಏಪ್ರಿಲ್ 16 ಭಾನುವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಲಾಗಿದೆ.
ಈಗಾಗಲೇ ಆಪ್ನ ಹಲವು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಿದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರಿಗೂ ಸಮನ್ಸ್ ಜಾರಿ ಮಾಡಲಾಗಿದೆ. ಈ ಪ್ರಕರಣದ ಜೊತೆ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೋವಾ ಪೊಲೀಸರು ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಏಪ್ರಿಲ್ 27ಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಹೊಸ ಮದ್ಯ ನೀತಿಯಡಿ ವ್ಯಾಪಾರಿಗಳಿಗೆ ಪರವಾನಿಗೆ ನೀಡಲು ದೆಹಲಿ ಸರ್ಕಾರ ಲಂಚವನ್ನು ಪಡೆದಿದೆ ಎಂದು ಆರೋಪಿಸಲಾಗಿದ್ದು, ಖಜಾನೆಗೆ ನಷ್ಟ, ರಾಜ್ಯಕ್ಕೆ ವಂಚನೆ, ಕ್ರಿಮಿನಲ್ ಪಿತೂರಿ ಮತ್ತು ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದ ಆರೋಪದ ಮೇಲೆ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.
ಕೇಜ್ರಿವಾಲ್ ದೆಹಲಿ ಸಿಎಂ ಆಗಿದ್ದರೂ ಯಾವುದೇ ಖಾತೆಗಳನ್ನು ಹೊಂದಿಲ್ಲ. ಮನೀಶ್ ಸಿಸೋಡಿಯಾ ಗೃಹ, ಶಿಕ್ಷಣ, ಹಣಕಾಸು, ಯೋಜನೆ, ಭೂಮಿ ಮತ್ತು ಕಟ್ಟಡ, ಗುಪ್ತಚರ, ಸೇವೆಗಳು, ಪ್ರವಾಸೋದ್ಯಮ, ಕಲೆ, ಸಂಸ್ಕೃತಿ ಮತ್ತು ಭಾಷೆ, ಕಾರ್ಮಿಕ, ಉದ್ಯೋಗ, ಲೋಕೋಪಯೋಗಿ ಇಲಾಖೆ, ಆರೋಗ್ಯ, ಕೈಗಾರಿಕೆ, ಇಂಧನ, ನಗರಾಭಿವೃದ್ಧಿ, ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಸೇರಿ 18 ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದರು.