ಹೈದರಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ, ಸನ್ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಮಂಗಳವಾರ ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸನ್ರೈಸರ್ಸ್ ಹೈದರಾಬಾದ್ ನೀಡಿದ್ದ 187 ರನ್ಗಳ ಸವಾಲಿನ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮೊದಲ ವಿಕೆಟ್ಗೆ ಫಾಫ್ ಡು ಪ್ಲೆಸಿಸ್(71) ಹಾಗೂ ವಿರಾಟ್ ಕೊಹ್ಲಿ(100) ಜೋಡಿ 172 ರನ್ಗಳ ಜತೆಯಾಟವಾಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಪರಿಣಾಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇನ್ನೂ 4 ಎಸೆತ ಬಾಕಿ ಇರುವಂತೆಯೇ 8 ವಿಕೆಟ್ ಭರ್ಜರಿ ಜಯ ಸಾಧಿಸಿತು. ಇದರ ಜತೆಗೆ ಅಂಕಪಟ್ಟಿಯಲ್ಲಿ 14 ಅಂಕಗಳ ಸಹಿತ ನಾಲ್ಕನೇ ಸ್ಥಾನಕ್ಕೆ ಲಗ್ಗೆಯಿಡುವಲ್ಲಿ ಯಶಸ್ವಿಯಾಯಿತು.
ಸನ್ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಪವರ್ ಪ್ಲೇನಲ್ಲಿ 20 ಎಸೆತಗಳನ್ನು ಎದುರಿಸಿ 32 ರನ್ ಬಾರಿಸಿದ್ದರು, ಇದಾದ ಬಳಿಕ 62 ಎಸೆತಗಳನ್ನು ಎದುರಿಸಿ ಮೂರಂಕಿ ಮೊತ್ತ ದಾಖಲಿಸುವಲ್ಲಿ ವಿರಾಟ್ ಕೊಹ್ಲಿ ಸಫಲರಾದರು. ಸನ್ರೈಸರ್ಸ್ ಹೈದರಾಬಾದ್ ಎದುರು, ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಪ್ರದರ್ಶನ ಆರೆಂಜ್ ಆರ್ಮಿ ಎದುರು ಅಷ್ಟೇನೂ ಉತ್ತಮವಾಗಿರಲಿಲ್ಲ. ಈ ಪಂದ್ಯಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಎದುರು ವಿರಾಟ್ ಕೊಹ್ಲಿ 20 ಪಂದ್ಯಗಳನ್ನಾಡಿ 31.61ರ ಬ್ಯಾಟಿಂಗ್ ಸರಾಸರಿಯಲ್ಲಿ ಕೇವಲ 569 ರನ್ ಬಾರಿಸಿದ್ದರು. ಶತಕ ಸಿಡಿಸಿದ ವಿರಾಟ್ ಕೊಹ್ಲಿ, ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು. ಇನ್ನು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿರಾಟ್ ಕೊಹ್ಲಿ, ತಮ್ಮ ಮೇಲೆ ಕೇಳಿ ಬರುತ್ತಿರುವ ಸ್ಟ್ರೈಕ್ರೇಟ್ ವಿಚಾರದ ಬಗ್ಗೆ ತುಟಿಬಿಚ್ಚಿದ್ದು, ಟೀಕಾಕಾರರಿಗೆ ಖಡಕ್ ಆಗಿಯೇ ಉತ್ತರ ನೀಡಿದ್ದಾರೆ.
“ನನ್ನ ಮೇಲೆ ನಾನು ಸಾಕಷ್ಟು ಒತ್ತಡಗಳನ್ನು ನಾನು ಈಗಾಗಲೇ ಹಾಕಿಕೊಂಡಿದ್ದೇನೆ. ಮೈದಾನದಾಚೆ ನನ್ನ ಬಗ್ಗೆ ಯಾರು ಏನು ಹೇಳುತ್ತಾರೆ ಎನ್ನುವುದರ ಬಗ್ಗೆ ನಾನು ಹೆಚ್ಚಿನ ಗಮನ ಕೊಡುವುದಿಲ್ಲ. ಯಾಕೆಂದರೆ ಅದು ಅವರ ಅಭಿಪ್ರಾಯವೇ ಹೊರತು, ನನ್ನದಲ್ಲ. ನಾನು ಆಡುತ್ತಿದ್ದೇನೆ ಎಂದರೆ ಕ್ರಿಕೆಟ್ನಲ್ಲಿ ಪಂದ್ಯವನ್ನು ಹೇಗೆ ಗೆಲ್ಲಿಸಬೇಕು ಎನ್ನುವುದು ನಿನಗೆ ಗೊತ್ತಿರಬೇಕು. ಕಳೆದ ಸಾಕಷ್ಟು ಸಮಯದಿಂದ ನಾನದನ್ನು ಮಾಡುತ್ತಾ ಬಂದಿದ್ದೇನೆ. ನಾನು ಪರಿಸ್ಥಿತಿಗೆ ತಕ್ಕಂತೆ ಆಡುತ್ತೇನೆ. ನನ್ನ ಪ್ರದರ್ಶನದ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ರೈಸರ್ಸ್ ಹೈದರಾಬಾದ್ ಎದುರು ಭರ್ಜರಿ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್ಗೆ ಮತ್ತಷ್ಟು ಹತ್ತಿರವಾಗಿದೆ. ಇದೀಗ ಮೇ 21ರಂದು ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್ಸಿಬಿ ತಂಡವು ತವರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಆರ್ಸಿಬಿ ತಂಡವು ಅಧಿಕೃತವಾಗಿ ಪ್ಲೇ ಆಫ್ಗೆ ಲಗ್ಗೆಯಿಡಲಿದೆ.