ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಿಧಾನಸೌಧದಲ್ಲಿ ಮಂಗಳವಾರ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಸಚಿವರು ಸಭೆ ನಡೆಸಿದರು. 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನದಿಂದಾಗುವ ಸಾಧಕ-ಬಾಧಕಗಳ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ 200 ಯೂನಿಟ್ವರೆಗೂ ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡುವ ಗ್ಯಾರಂಟಿಯನ್ನು ಕಾಂಗ್ರೆಸ್ ನೀಡಿತ್ತು. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗಳಿಸುವಂತೆ ಸಾರ್ವಜನಿಕರಿಂದ ಒತ್ತಡ ತೀವ್ರಗೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಎಲ್ಲಾ ಸಚಿವರ ಸಭೆ ಕರೆದಿದ್ದಾರೆ. ಸಭೆಗೆ ಪೂರಕ ಮಾಹಿತಿಯೊಂದಿಗೆ ಹಾಜರಾಗುವ ಉದ್ದೇಶದಿಂದ ಸಚಿವ ಜಾರ್ಜ್ ಅವರು, ಇಂಧನ ಇಲಾಖೆಯ ಹಿರಿಯ ಆಧಿಕಾರಿಗಳ ಜತೆ ಸಭೆ ನಡೆಸಿ ಅಂಕಿ-ಅಂಶಗಳ ಸಹಿತ ಮಾಹಿತಿ ಪಡೆದುಕೊಂಡರು.