ಬೆಂಗಳೂರು: ವರ್ಗಾವಣೆಗೆ ಬೇಸತ್ತು ನಾಗಮಂಗಲದ ಕೆಎಸ್ಆರ್ಟಿಸಿ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದು ಆ ನಂತರ ಜಗದೀಶ್ನನ್ನು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು ವಿಧಾನಸಭಾ ಕಲಾಪದಲ್ಲಿ ಭಾರೀ ಗದ್ದಲಕ್ಕೆ ಕಾರಣವಾಗಿದೆ. ಸದನದಲ್ಲಿ ಮಾಜಿ ಸಿಎಂಗಳಾದ ಹೆಚ್ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಇಬ್ಬರೂ ಈ ವಿಚಾರ ಪ್ರಸ್ತಾಪಿಸಿದ್ದು ಸಚಿವ ಎನ್.ಚಲುವರಾಯಸ್ವಾಮಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಶೂನ್ಯವೇಳೆಯಲ್ಲಿ ಬಸವರಾಜ ಬೊಮ್ಮಾಯಿ ಇದೇ ವಿಚಾರವನ್ನು ಪ್ರಸ್ತಾಪಿಸಿದರು. ಸೂಕ್ತ ತನಿಖೆ ಆಗಬೇಕು, ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಕೆಎಸ್ಆರ್ಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಯತ್ನಿಸುವ ಮುನ್ನ ಬರೆದ ಪತ್ರದಲ್ಲಿ ಸಚಿವರ ಹೆಸರು ಉಲ್ಲೇಖಿಸಿದ್ದಾರೆ. ಎಫ್ಐಆರ್ನಲ್ಲಿ ಸಚಿವರ ಹೆಸರು ಉಲ್ಲೇಖಿಸಬೇಕು. ಸಚಿವ ಎನ್.ಚಲುವರಾಯಸ್ವಾಮಿ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು. ಬೊಮ್ಮಾಯಿ ಹೇಳಿಕೆ ವೇಳೆ ಆಡಳಿತ ಪಕ್ಷದ ಶಾಸಕರಿಂದ ವಿರೋಧ ವ್ಯಕ್ತವಾಯಿತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಆರ್.ಪುರಂ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ನಂದೀಶ್ ವಿಚಾರ ಪ್ರಸ್ತಾಪ ಮಾಡಿ ‘ಕೈ’ ಶಾಸಕರು ಚಲುವರಾಯಸ್ವಾಮಿ ಬೆಂಬಲಕ್ಕೆ ನಿಂತರು.