ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾದ ಪೋಸ್ಟ್ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಪೋಸ್ಟ್ನಲ್ಲಿ ಏನಿದೆ?
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.
ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ.