ಬೆಂಗಳೂರು : ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರುವ ಕುರಿತು ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಜಂಟಿಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು.
ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಕೇಂದ್ರಕ್ಕೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣದಲ್ಲಿ ಮೋಸವಾಗುತ್ತಿದೆ. ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 45 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗುತ್ತಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು (ಫೆ.5) ಸೋಮವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಇಂದು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ರಾಜ್ಯದ ಪಾಲಿನ ತೆರಿಗೆ ಹಣವನ್ನು ನೀಡದ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 7 ರಂದು ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನಾವು ಕೇಂದ್ರ ಸರ್ಕಾರಕ್ಕೆ 100 ರೂ. ತೆರಿಗೆ ಕಟ್ಟಿದರೆ ನಮಗೆ ಶೇ. 12-13ರಷ್ಟು ವಾಪಸ್ ಬರುತ್ತಿದೆ. ಆದರೂ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲವೆಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.