ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನೇ ದಿನೇ ಏರಿಕೆಯಾಗುತ್ತಿದ್ದು, ಹೈಕಮಾಂಡ್ನಿಂದ ಬಿ.ಫಾರಂ ಗಿಟ್ಟಿಸಿರುವ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಕೆಗೆ ಮುಂದಾಗಿದ್ದಾರೆ. ಅದರ ಭಾಗವಾಗಿ ಸೋಮವಾರ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಆರ್.ಅಶೋಕ್ ಉಮೇದುವಾರಿಕೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬನಶಂಕರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ದೇವೇಗೌಡ ಪೆಟ್ರೋಲ್ ಬಂಕ್ನಿಂದ ಕಿಮ್ಸ್ ಕಾಲೇಜಿನವರೆಗೂ ಮೆರವಣಿಗೆ ನಡೆಸಿ ಬನಶಂಕರಿ ಎರಡನೇ ಹಂತದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಆರ್.ಅಶೋಕ್ಗೆ ಸಂಸದ ತೇಜಸ್ವಿ ಸೂರ್ಯ, ಪಕ್ಷದ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದರು. ಇನ್ನೂ ಶಾಸಕ ಎಂ.ಕೃಷ್ಣಪ್ಪ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಬೆಂಬಲಿಗರು ಹಾಗೂ ಕುಟುಂಬದ ಸದಸ್ಯರೊಂದಿಗೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾರ್ಯಕರ್ತರ ಬೃಹತ್ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ಎ.ಮುರಳಿ ಅವರು ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಇದಕ್ಕೂ ಮುನ್ನ ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು.