ಮಂಡ್ಯ : ಮದ್ದೂರು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶುಕ್ರವಾರ ಸಂಜೆ ನಿರಂತರವಾಗಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಸುರಿದ ಬಿರುಗಾಳಿ ಮಳೆಗೆ ನಗರಕೆರೆ ಸೇರಿದಂತೆ ಹಲವು ಗ್ರಾಮಗಳಲ್ಲಿ 30 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿ ಹಲವು ಅವಾಂತರಗಳು ಸೃಷ್ಟಿಯಾಗಿವೆ.
ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ನಗರಕೆರೆ, ಸೋಂಪುರ, ಮಾಲಗಾರನಹಳ್ಳಿ, ಅಜ್ಜಹಳ್ಳಿ, ಕ್ಯಾತಘಟ್ಟ, ಹುಲಿಗೆರೆಪುರ ಸೇರಿದಂತೆ 9 ಕ್ಕೂ ಹೆಚ್ಚು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು,
ಗ್ರಾಮಸ್ಥರಿಗೆ ತೊಂದರೆ ಉಂಟಾಗಿದ್ದು, ವಾಹನ ಸಂಚಾರಕ್ಕೂ ಅಸ್ತವ್ಯಸ್ತಗೊಂಡಿದೆ.
ಹಾಗೂ 30 ಕ್ಕೂ ಹೆಚ್ಚು ಮನೆಗಳ ಹಂಚುಗಳು ಗಾಳಿಗೆ ತೂರಿ ಹೋಗಿ ಹಲವು ಅವಾಂತರಗಳು ಸೃಷ್ಟಿಯಾಗಿವೆ.
ಬೆಸಗರಹಳ್ಳಿ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲೂ 15 ಕ್ಕೂ ಹೆಚ್ಚು ತೆಂಗಿನ ಮರ ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತಗೊಂಡಿರುವ ಬಗ್ಗೆ ವರದಿಯಾಗಿದೆ.
ಸೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ರಸ್ತೆಗೆ ಬಿದ್ದಿರುವ ಕಂಬಗಳನ್ನು ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದು, ನಗರಕೆರೆ, ಬೆಸಗರಹಳ್ಳಿ ಗ್ರಾಮಗಳಿಗೆ ಎರಡು ದಿನಗಳ ಕಾಲ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ ಎಂದು ಸೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ವರದಿ : ಗಿರೀಶ್ ರಾಜ್ ಮಂಡ್ಯ