ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದುವರಿದ ಮಳೆಯ ಅಬ್ಬರದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆ ಗೋಡೆ ಕುಸಿದು ಕಾಂಕ್ರೀಟ್ ರಸ್ತೆ ಬಿರುಕು ಬಿಟ್ಟ ಘಟನೆ ಸಕಲೇಶಪುರ ತಾಲ್ಲೂಕಿನ, ಗುಲಗಳಲೆ ಗ್ರಾಮದ, ರಾಟೆಮನೆ ಸಮೀಪ ನಡೆದಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. 40 ಅಡಿಯಷ್ಟು ಎತ್ತರಕ್ಕೆ ನಿರ್ಮಿಸಿದ್ದ ತಡೆಗೋಡೆ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕುಸಿದು ಬಿದ್ದಿದ್ದು ರಸ್ತೆಯೇ ಬಿರುಕು ಬಿಡುತ್ತಿದೆ. ಸ್ಥಳಕ್ಕೆ ರಸ್ತೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆ ಸಂಸ್ಥೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ದುರಸ್ತಿ ಆರಂಭಿಸಿದ್ದಾರೆ.