ಕುವೆಂಪು ಬಾಲ್ಯ
ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ, ತಾಯಿ ಸೀತಮ್ಮ.ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ, ಮಾಧ್ಯಮಿಕ ಶಿಕ್ಷ ಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ, ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ.ಎ. ಪದವಿಯನ್ನೂ ಪಡೆದರು
ರಾಷ್ಟ್ರಕವಿ ವೃತ್ತಿಜೀವನ
ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
ವೈವಾಹಿಕ ಜೀವನ
ಮೈಸೂರಿನ ಒಂಟಿಕೊಪ್ಪಲಿನ ‘ ಉದಯರವಿ’ ಮನೆಯಲ್ಲಿ ನೆಲೆಸಿದ್ದ ಕುವೆಂಪು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಇಂಜಿನಿಯರ್ ಆಗಿ ಆಸ್ಪ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಕುವೆಂಪು ಅವರ ಅಳಿಯ. ಕುವೆಂಪು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ಅವರ ಹುಟ್ಟೂರಾದ ಕುಪ್ಪಳ್ಳಿಯಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.
ಕುವೆಂಪು ಸಾಹಿತ್ಯ ಕೃಷಿ ಮತ್ತು ಪಡೆದ ಪ್ರಶಸ್ತಿಗಳು
ಕುವೆಂಪು ಅವರು 20ನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋುಷಿ. ತಮ್ಮ ಮೇರು ಕೃತಿ ಶ್ರೀರಾಮಾಯಣ ದರ್ಶನಂನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದಾರೆ. ಅವರ ಎರಡು ಬೃಹತ್ ಕಾದಂಬರಿಗಳಾದ ’ಕಾನೂರು ಹೆಗ್ಗಡತಿ’ ಹಾಗೂ ’ಮಲೆಗಳಲ್ಲಿ ಮದುಮಗಳು’ ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ. 1995ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1958ರಲ್ಲಿ ಪದ್ಮಭೂಷಣ, 1964ರಲ್ಲಿ ಕರ್ನಾಟ ಸರಕಾರದಿಂದ ರಾಷ್ಟ್ರಕವಿ, 1968ರಲ್ಲಿ ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಭಾರತೀಯ ಜ್ಞಾನಪೀಠ ಪ್ರಶಸ್ತಿ, 1987ರಲ್ಲಿ ಪಂಪ ಪ್ರಶಸ್ತಿ, 1989ರಲ್ಲಿ ಪದ್ಮವಿಭೂಷಣ, 1992ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಲಭಿಸಿದೆ
ವಿಶ್ವ ಮಾನವ ಸಂದೇಶ
ಹುಟ್ಟುವ ಪ್ರತಿ ಮಗುವು ವಿಶ್ವಮಾನವನೇ! ಆ ನಂತರ ಆ ಮಗುವನ್ನು ಜಾತಿ ,ಮತದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗಬಾರದು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ಹಾಗಾಗಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶವಾಗಿದೆ. ಬುದ್ಧ, ಬಸವರ ಹಾಗೆ ಸಮಾಜದಲ್ಲಿ ವ್ಯಕ್ತಿ ಸ್ವತಂತ್ರವಾಗಿ, ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕೆಂದು ಅವರು ಹೇಳುತ್ತಿದ್ದರು.