ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಲು ಸಿಐಡಿ ತಂಡ ತಯಾರಿ ನಡೆಸಿದೆ. ಇನ್ನು ಒಂದು ವಾರದಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಳೆದ ಏಪ್ರಿಲ್ 18 ರಂದು ಹುಬ್ಬಳ್ಳಿ ನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾಳ ಭೀಕರ ಕೊಲೆಯಾಗಿತ್ತು.
ಬಳಿಕ ನಿರಂಜನ್ ಅವರು ಈ ಪ್ರಕರಣದಲ್ಲಿ ಹಂತಕ ಫಯಾಜ್ ಅಷ್ಟೇ ಅಲ್ಲ ಇನ್ನೂ ಕೆಲವರು ಶಾಮೀಲಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಅಲ್ಲದೇ ಲವ್ ಜಿಹಾದ್ ಇರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ತನಿಖೆ ನಡೆಸಲು ಸಿಐಡಿಗೆ ವಹಿಸಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ್ದ ಸಿಐಡಿ ಅಧಿಕಾರಿಗಳ ತಂಡ ಫಯಾಜ್ ಪೋಷಕರು ಹಾಗೂ ಇತರೇ 10 ಮಂದಿಯನ್ನು ತನಿಖೆಗೆ ಒಳಪಡಿಸಿತ್ತು. ಇದೀಗ ವಿಚಾರಣೆ ಪ್ರಕ್ರಿಯೆ ಪೂರ್ಣಗೊಳಿಸಿರುವ ಸಿಐಡಿ ತಂಡ ಚಾರ್ಜ್ ಶೀಟ್ ಸಲ್ಲಿಸಲು ಸಕಲ ತಯಾರಿ ಮಾಡಿಕೊಂಡಿದೆ. ಇನ್ನೊಂದೇ ವಾರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.