ದಿಸ್ ಪುರ್:- 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ಆರೋಪಿಗಳ ಪೈಕಿ ಓರ್ವ ಇಂದು ಬೆಳಿಗ್ಗೆ ಕೆರೆಗೆ ಹಾರಿ ಸಾವನ್ನಪ್ಪಿದ್ದಾನೆ.
ಅಸ್ಸಾಂನ ಧಿಂಗ್ ನಲ್ಲಿ ಘಟನೆ ಜರುಗಿದೆ.
ʼʼಶುಕ್ರವಾರ ಬಂಧಿಸಲ್ಪಟ್ಟ ಪ್ರಮುಖ ಆರೋಪಿ ತಫಾಜುಲ್ ಇಸ್ಲಾಂ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಕೊಳಕ್ಕೆ ಹಾರಿ ಸಾವನ್ನಪ್ಪಿದ್ದಾನೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಸ್ಸಾಂನ ನಾಗಾಂವ್ ಜಿಲ್ಲೆಯ ಧಿಂಗ್ನಲ್ಲಿ ಗುರುವಾರ 14 ವರ್ಷದ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಕೊಳದ ಬಳಿಯ ರಸ್ತೆ ಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಸ್ಥಳೀಯರು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಈ ಘೋರ ಕೃತ್ಯ ಬೆಳಕಿಗೆ ಬಂದಿತ್ತು. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಟ್ಯೂಷನ್ ಮುಗಿಸಿ ಸೈಕಲ್ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದರು ಎಂದು ಬಳಿಕ ಪೊಲೀಸರು ಮಾಹಿತಿ ನೀಡಿದ್ದರು.
ಇಂದು ಮುಂಜಾನೆ 3.30ರ ಸುಮಾರಿಗೆ ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಆರೋಪಿಯನ್ನು ಅಪರಾಧ ನಡೆದ ಸ್ಥಳಕ್ಕೆ ಕರೆದೊಯ್ಯಲಾಯಿತು. ಈ ವೇಳೆ ಆತ ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ” ತಫಾಜುಲ್ ಇಸ್ಲಾಂ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಕೊಳಕ್ಕೆ ಹಾರಿದ್ದಾನೆ. ತಕ್ಷಣವೇ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತಾದರೂ ಕಾಪಾಡಲು ಸಾಧ್ಯವಾಗಲಿಲ್ಲ. ಸುಮಾರು ಎರಡು ಗಂಟೆಗಳ ನಂತರ ಆತನ ಶವ ಪತ್ತೆಯಾಯ್ತು” ಎಂದು ಅಧಿಕಾರಿಗಳು ವಿವರಿಸಿದ್ದಾರೆ
ಆರೋಪಿಗಳ ಪೈಕಿ ಇಬ್ಬರನ್ನು ಈಗಾಗಲೇ ಬಂಧಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಮೂರನೆಯವನಿಗಾಗಿ ಬಲೆ ಬೀಸಿದ್ದಾರೆ.