ಬೆಂಗಳೂರು: ನಂದಿನಿ ವಿಚಾರದಲ್ಲಿ ಪ್ರತಿಪಕ್ಷಗಳು ಕೀಳು ರಾಜಕೀಯ ಮಾಡುತ್ತಿವೆ ಎಂದು ಸಿಎಂ ಬೊಮ್ಮಾಯಿ ಅವರು ಟೀಕಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ನಮ್ಮ ನಂದಿನಿ ಹಾಲಿಗೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇದೆ.
ಎಲ್ಲಾ ರಾಜ್ಯಗಳಲ್ಲಿಯೂ ಇದು ದೊರೆಯುತ್ತಿದ್ದು, ಹೊರ ದೇಶಗಳಿಗೂ ರಫ್ತಾಗುತ್ತಿದೆ. 2018ರಲ್ಲಿ ಪ್ರತಿದಿನ 84 ಲಕ್ಷ ಲೀಟರ್ ಹಾಲು ಉತ್ಪಾದಿಸಲಾಗುತ್ತಿತ್ತು. ಪ್ರಸ್ತುತ 94 ಲಕ್ಷ ಲೀಟರ್ ಹಾಲನ್ನು ಉತ್ಪಾದಿಸಲಾಗುತ್ತಿದೆ. ಈ ಅಂಕಿ ಅಂಶಗಳನ್ನು ಗಮನಿಸಿದರೆ ಸಾಕು, ನಂದಿನಿಯ ಬ್ರಾಂಡ್ ಮೌಲ್ಯ ಎಷ್ಟರ ಮಟ್ಟಿಗೆ ಹೆಚ್ಚಿದೆ ಎಂಬುದು ತಿಳಿಯುತ್ತದೆ.
ಆದರೆ ರಾಜ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು, ನಂದಿನಿ ಬಗ್ಗೆ ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಜನರಲ್ಲಿ ಗೊಂದಲ ಉಂಟು ಮಾಡುವ ಕೀಳು ರಾಜಕೀಯ ಮಾಡುತ್ತಿವೆ. ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಇನ್ನೂ ನಂದಿನಿ ವಿವಾದಕ್ಕೆ ತೆರೆ ಎಳೆಯುವಂತೆ ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರತಿಪಕ್ಷಗಳು ಕೀಳು ರಾಜಕೀಯ ಮಾಡುತ್ತಿವೆ ಎಂದು ಟೀಕಿಸಿದ್ದಾರೆ.