ಬೆಂಗಳೂರು: ಎಐಸಿಸಿಯಿಂದ (AICC) ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ (Siddaramaiah) ಹೆಸರು ಘೋಷಣೆಯಾದ ಬೆನ್ನಲ್ಲೇ ಸಿದ್ದರಾಮಯ್ಯನವರು ಈ ಕುರಿತು ತಮ್ಮ ಟ್ವಿಟ್ಟರ್ (Twitter) ಖಾತೆಯಲ್ಲಿ ಟ್ವೀಟ್ (Tweet) ಮಾಡಿ ಸಂತೋಷವನ್ನು ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದು, ಮುಂದಿನ ಎರಡು ವರ್ಷಗಳ ಕಾಲ ಆಡಳಿತವನ್ನು ನೀಡಲಿದ್ದಾರೆ.
ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D.K.Shivakumar) ಅವರು ತನಗೇ ಸಿಎಂ ಪಟ್ಟ ನೀಡಬೇಕು ಎಂದು ಪಣತೊಟ್ಟಿದ್ದರಾದರೂ ಕೊನೆಗೆ ಹೈಕಮಾಂಡ್ ಒತ್ತಾಯಕ್ಕೆ ಮಣಿದು ಡಿಸಿಎಂ ಆಗಿ ಕಾರ್ಯ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ. ಈಗ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದ ಹಿನ್ನಲೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಈ ಕುರಿತು ಟ್ವೀಟ್ ಮಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ಫೋಟೋ ಪೋಸ್ಟ್ ಮಾಡುವ ಮೂಲಕ ಸಂತೋಷವನ್ನು ಹಂಚಿಕೊಂಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ನಲ್ಲಿ ಏನಿದೆ?
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಟ್ವೀಟ್ ಮಾಡಿ ಡಿಕೆಶಿ ಹಾಗೂ ಖರ್ಗೆ ಅವರೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ.