ಬೆಂಗಳೂರು: ಪಂಚಮಸಾಲಿಗೆ 2 ಎ ಮೀಸಲಾತಿ ನೀಡದಂತೆ ಕೋರಿ ರಾಘವೇಂದ್ರ ಡಿ.ಜಿ. ಎಂಬುವರು ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ಇಂದು ಬೆಂಗಳೂರಿನ ಹೈಕೋರ್ಟ್ ನ ವಿಭಾಗೀಯ ಪೀಠದಲ್ಲಿ ನಡೆಯಿತು. ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಸರ್ಕಾರದ ನಿಲುವು ತಿಳಿಸಲು ರಾಜ್ಯ ಸರ್ಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಕಾಲಾವಕಾಶ ಕೋರಿದರು. ಹೀಗಾಗಿ ಅರ್ಜಿದಾರರು ಹಾಗೂ ರಾಜ್ಯ ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ರವಿವರ್ಮಕುಮಾರ್ ಇನ್ನೂ ಹಿಂದುಳಿದ ವರ್ಗಗಳ ಆಯೋಗದ ವರದಿಯ ಪ್ರತಿಯನ್ನು ಸರ್ಕಾರ ತಮಗೆ ಒದಗಿಸಿಲ್ಲ.
ಆಯೋಗ ವರದಿ ಸಲ್ಲಿಸಿದ ನಂತರ ರಾಜ್ಯ ಸರ್ಕಾರ 2 ಸಿ, 2 ಡಿ ಮೀಸಲಾತಿ ನೀಡಿದೆ. ಸರ್ಕಾರದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಮಾಹಿತಿ ಇದೆ. ಹೀಗಾಗಿ ಹಿಂದುಳಿದ ವರ್ಗಗಳ ಆಯೋಗದ ವರದಿಯ ಪ್ರತಿಯನ್ನು ತಮಗೆ ನೀಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆ ಪ್ರಸನ್ನ ಬಿ ವರಾಳೆ, ಮುಚ್ಚಿದ ಲಕೋಟೆಯಲ್ಲಿನ ವರದಿ ತೆರೆಯಲು ಕೋರ್ಟ್ ನ ಅಧಿಕಾರಿಗೆ ಸೂಚನೆ ನೀಡಿದರು. ಅಲ್ಲದೇ ವರದಿಯ ಪ್ರತಿಯನ್ನು ಅರ್ಜಿದಾರರಿಗೆ ಒದಗಿಸಬೇಕು. ಪ್ರತಿ ಸಿಕ್ಕ 2 ವಾರದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಅಗತ್ಯವಿರುವ ತಿದ್ದುಪಡಿ ಮಾಡಲು ಅರ್ಜಿದಾರರಿಗೆ ಅವಕಾಶ ನೀಡಿದರು.