ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಶೇ 50ರಷ್ಟು ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಸರ್ಕಾರ ಮತ್ತೊಮ್ಮೆ ಅವಕಾಶ ನೀಡಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಮಾರ್ಚ್ 4ರಿಂದ 15 ದಿನಗಳ ಕಾಲಾವಕಾಶ ನೀಡಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಮೊದಲ 4 ದಿನಗಳಲ್ಲಿ 2,68,16,500 ರೂ. ದಂಡ ಸಂಗ್ರಹವಾಗಿದೆ. ಕಳೆದ 4 ದಿನಗಳಲ್ಲಿ 93,532 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಸರ್ಕಾರವು ಆದೇಶದಲ್ಲಿ ತಿಳಿಸಿತ್ತು. ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು. ಅದರಂತೆ ಸರ್ಕಾರ ಕ್ರಮ ಕೈಗೊಂಡಿತ್ತು.