ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಮಾಜಿ ಸಚಿವ ಡಾ. ಕೆ.ಸುಧಾಕರ್ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. ಸುಧಾಕರ್ ಅವರು ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬಿ.ಎಲ್.ಸಂತೋಷ್ ಜೊತೆಗಿರುವ ಫೋಟೋ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್ಗೆ ಸುಧಾಕರ್ ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ.ಸುಧಾಕರ್ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನು ಭವಿಸಿದ್ದರು. ಇವರ ವಿರುದ್ಧ ಸ್ಪರ್ಧೆಗಿಳಿದಿದ್ದ ಕಾಂಗ್ರೆಸ್ನ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿದ್ದರು.
ಈಗ ಲೋಕಸಭೆ ಚುನಾವಣೆಗೆ ಕಾಲ ಸನ್ನಿಹಿತವಾಗಿದೆ. ಈ ಹೊತ್ತಲ್ಲಿ ರಾಜ್ಯ ನಾಯಕರು ದೆಹಲಿಗೆ ತೆರಳಿ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚುನಾವಣೆಗೆ ಟಿಕೆಟ್ ಗಿಟ್ಟಿಸಲು ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.