ಬೆಂಗಳೂರು ;- ಮಳೆಗೆ ಜನಜೀವನ, ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚನೆ ನೀಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿರುವ ಸಚಿವರು, ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ ಶೇ.56ರಷ್ಟು ಕೊರತೆಯಾಗಿತ್ತು. ಆದರೆ ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಹೀಗಾಗಿ ಮಳೆ ಕೊರತೆಯ ಪ್ರಮಾಣ ಶೇ.56 ರಿಂದ ಶೇ.14ಕ್ಕೆ ಇಳಿದಿದೆ. ರಾಜ್ಯದಲ್ಲಿ ಒಟ್ಟಾರೆ ಶೇ.80 ರಷ್ಟು ಮಳೆಯಾಗಿದೆ. ಕಳೆದ ಒಂದು ವಾರದಿಂದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಭಾಗಗಳಾದ ಬೀದರ್ ಹಾಗೂ ಕಲಬುರಗಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಮತ್ತು ಆಸ್ತಿಪಾಸ್ತಿ ನಷ್ಟವಾಗದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಉತ್ತರ ಒಳನಾಡು ಭಾಗಗಳಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ವಾಡಿಕೆಗಿಂತ ಶೇ.170 ರಷ್ಟು ಅಧಿಕ ಮಳೆಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶೇ. 300, ಯಾದಗಿರಿ ಶೇ.160, ಬೀದರ್ ಶೇ.155, ಬೆಳಗಾವಿಯಲ್ಲಿ ಶೇ.186, ಬಾಗಲಕೋಟೆ ಶೇ.174, ವಿಜಯಪುರ ಶೇ.185 ಹಾಗೂ ಗದಗ ಜಿಲ್ಲೆಯಲ್ಲಿ ಶೇ.166 ರಷ್ಟು ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದರು.